ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಆಗ್ರಹಿಸಿ ಪ್ರತಿಭಟನೆ ಹುಬ್ಬಳ್ಳಿ:ನಗರದಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿಗಾಗಿ ನಿನ್ನೆಯಿಂದ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲು ಐದು ವರ್ಷಗಳವರೆಗೆ ಅವಕಾಶ ನೀಡಿ ಠರಾವು ಪಾಸ್ ಮಾಡಿತ್ತು. ಈ ಠರಾವಿಗೆ ತಡೆಯಾಜ್ಞೆ ಕೋರಿ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಆದರೆ ಮಹಾನಗರ ಪಾಲಿಕೆ ಅನುಮತಿ ನೀಡದೇ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮಹಾನಗರ ಪಾಲಿಕೆ ಎದುರಿನ ಗದಗ-ಹುಬ್ಬಳ್ಳಿ ನಡುವಿನ ರಸ್ತೆ ತಡೆದರು.
ಎರಡು ದಿನಗಳಿಂದ ಹೋರಾಟ ಮಾಡುತ್ತಿದ್ದರೂ ಆಯುಕ್ತರು ಮಹಾನಗರ ಪಾಲಿಕೆಗೆ ಆಗಮಿಸಿಲ್ಲ. ಕೂಡಲೇ ಆಯುಕ್ತರು ಪಾಲಿಕೆಗೆ ಆಗಮಿಸಬೇಕೆಂದು ಪಟ್ಟು ಹಿಡಿದರು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟದ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಇದ್ದರು.
ಪ್ರತಿಭಟನೆಯಿಂದ ಕೆಲಕಾಲ ರಸ್ತೆ ಸಂಚಾರ ಸ್ಥಗಿತಗೊಂಡ ಕಾರಣ ವಾಹನ ಸವಾರರು ಪರದಾಡಬೇಕಾಯಿತು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಪರಿಸ್ಥಿತಿ ತಿಳಿಸಿಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ರಸ್ತೆ ತಡೆಯದೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಪ್ರತಿಭಟನಾಕಾರರು ನಡೆದುಕೊಳ್ಳಬೇಕು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸರು ಕೆಲಸ ಮಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಮಾತನಾಡಿ, ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮತ್ತು ಹಿಂದೂ ಪರ ಕಾರ್ಯಕರ್ತರು ದಿಢೀರ್ ರಸ್ತೆ ಬಂದ್ ಮಾಡಿದ್ದಾರೆ. ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಿದೆ. ತಕ್ಷಣವೇ ಪ್ರತಿಭಟನಾಕಾರರನ್ನು ವಾಪಸ್ ಕಳಿಸಿ, ರಸ್ತೆ ಸಂಚಾರ ಸುಗಮಗೊಳಿಸಿದ್ದೇವೆ. ಈ ವಿಚಾರವಾಗಿ ಪಾಲಿಕೆ ಆಯುಕ್ತರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅಲ್ಲಿಯವರೆಗೂ ಪ್ರತಿಭಟನಾಕಾರರು ಶಾಂತಿ ಕಾಪಾಡಬೇಕು ಎಂದರು.
ಕಾನೂನು ಎಲ್ಲರಿಗೂ ಒಂದೇ. ಸಾರ್ವಜನಿಕರಿಗೆ ತೊಂದರೆ ಮಾಡಿದರೆ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಳೆದೆರಡು ದಿನಗಳಿಂದ ಪಾಲಿಕೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪಾಲಿಕೆ ದೂರು ನೀಡಲಾಗಿದೆಯೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಾಲಿಕೆಯಿಂದ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ: ಠರಾವು ಪ್ರಶ್ನಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್