ಹುಬ್ಬಳ್ಳಿ:ಮೈಸೂರು ಕಾರ್ಯಕ್ರಮ ಮುಗಿಸಿಕೊಂಡು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶೇಷ ವಿಮಾನದ ಮೂಲಕ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಪೌರಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಜಿಮ್ ಖಾನಾ ಮೈದಾನದತ್ತ ದ್ರೌಪದಿ ಮುರ್ಮು ಪ್ರಯಾಣ ಬೆಳೆಸಿದ್ದು, ಇನ್ನೇನು ಕೆಲವೇ ಕ್ಷಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪತಿ ಮುರ್ಮು ಜೊತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವರಾದ ಶಂಕರಪಾಟೀಲ್ ಮುನೇನಕೊಪ್ಪ, ಹಾಲಪ್ಪ ಆಚಾರ್, ಶಾಸಕರಾದ ಅರವಿಂದ ಬೆಲ್ಲದ್, ಪ್ರಸಾದ್ ಅಬ್ಬಯ್ಯ ಹಾಗೂ ಸಲೀಂ ಅಹ್ಮದ್ ಸ್ವಾಗತಿಸಿದರು.