ಹುಬ್ಬಳ್ಳಿ: ಸಾರ್ವಜನಿಕರಿಗೆ ಕೋವಿಡ್ ಲಸಿಕೆಯ ಮಹತ್ವ ಹಾಗೂ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ವಾಯವ್ಯ ಸಾರಿಗೆ ಸಂಸ್ಥೆ ಬಸ್ ಟಿಕೆಟ್ನಲ್ಲಿ ಸಂದೇಶಗಳನ್ನು ಮುದ್ರಿಸಲಾಗುತ್ತಿದೆ.
ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತಿತರೆ ಇಲಾಖೆಗಳು ಶ್ರಮಿಸುತ್ತಿವೆ. ಸೋಂಕು ಹರಡುವುದನ್ನು ತಡೆಯಲು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ವಿವಿಧ ಇಲಾಖೆಗಳು ಕೆಲಸ ಮಾಡುತ್ತಿವೆ.
ಸಾರ್ವಜನಿಕರಿಗೆ ದೈನಂದಿನ ಅಗತ್ಯ ಸಾರಿಗೆ ಸೇವೆ ಒದಗಿಸುತ್ತಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ತಡೆಯಲು ಪ್ರಾರಂಭದಿಂದಲೂ ಹಲವಾರು ಉಪಕ್ರಮಗಳನ್ನು ಜಾರಿಗೊಳಿಸಿದೆ. ಇದೀಗ ಕೋವಿಡ್ ಮೂರನೇ ಅಲೆ ಭೀತಿ, ಡೆಲ್ಟಾ ಪ್ಲಸ್ ಆತಂಕ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸಾರಿಗೆ ಸಂಸ್ಥೆ ಮುಂದಾಗಿದೆ. ಬಸ್ಸುಗಳಲ್ಲಿ ಪ್ರಯಾಣಿಕರಿಗೆ ನೀಡುವ ಟಿಕೆಟ್ಗಳಲ್ಲಿ ಕೊರೊನಾ ಜಾಗೃತಿ ಸಂದೇಶಗಳನ್ನು ಮುದ್ರಿಸಲಾಗುತ್ತಿದೆ.
ಸಂದೇಶಗಳು:
- ಕೊರೊನಾ ಅಪಾಯ ತಡೆಯಲು ತಪ್ಪದೇ ಲಸಿಕೆ ಪಡೆಯಿರಿ
- ಕೊರೊನಾದಿಂದ ರಕ್ಷಿಸಿಕೊಳ್ಳಲು ತಪ್ಪದೇ ಲಸಿಕೆ ಪಡೆಯಿರಿ
- ಬಸ್ ಮತ್ತು ನಿಲ್ದಾಣದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
- ಕೊರೊನಾದಿಂದ ರಕ್ಷಿಸಿಕೊಳ್ಳಲು ತಪ್ಪದೇ ಮಾಸ್ಕ್ ಧರಿಸಿರಿ
ಹೀಗೆ ಮುಂತಾದ ಸಂದೇಶಗಳು ಪ್ರಯಾಣಿಕರ ಗಮನ ಸೆಳೆಯುತ್ತಿವೆ. ಸಾರಿಗೆ ಸಂಸ್ಥೆಯ ಈ ಕ್ರಮಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.