ಹುಬ್ಬಳ್ಳಿ : ಯುವಕನನ್ನು ವಿವಸ್ತ್ರಗೊಳಿಸಿ ಮನಬಂದಂತೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸರು ಈಗಾಗಲೇ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯರ ಇಬ್ಬರು ಪುತ್ರರನ್ನೂ ಬಂಧಿಸಲಾಗಿದೆ.
ಮೊದಲು ಘಟನೆಯ ಎರಡು ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಇಪ್ಪತ್ತಕ್ಕೂ ಹೆಚ್ಚು ಮಂದಿ ಯುವಕನಿಗೆ ಥಳಿಸುತ್ತಿರುವ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶ್ಯಾಮ್ ಜಾಧವ್ ಅವರ ಇಬ್ಬರು ಪುತ್ರರನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಮಾಜಿ ಕಾರ್ಪೊರೇಟರ್ ಶ್ಯಾಮ್ ಜಾಧವ್ ಪುತ್ರ ಗಣೇಶ್ ಎಂಬಾತನನ್ನು ಪೊಲೀಸರು ಸೆರೆ ಹಿಡಿದಿದ್ದರು. ಶನಿವಾರ ಇನ್ನೊಬ್ಬ ಪುತ್ರ ಅಭಿಷೇಕ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಇವರ ಜೊತೆಗೆ ರಾಹುಲ್ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದೆ.
ಸಂದೀಪ್ ಸಾಳುಂಕೆ ಎಂಬ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇದುವರೆಗೆ 7 ಮಂದಿಯನ್ನು ಬಂಧಿಸಲಾಗಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಬುದ್ನಿ ಅವರನ್ನು ಬೇರೆಡೆ ನಿಯೋಜಿಸಿ ಜಯಪಾಲ ಪಾಟೀಲರನ್ನು ಪ್ರಭಾರಿಯಾಗಿ ನೇಮಿಸಲಾಗಿತ್ತು.