ಧಾರವಾಡ:ಕರ್ನಾಟಕ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯನ್ನು 2020ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳ್ಳಿಸಲು ಸರ್ಕಾರ ಮಂಜೂರಾತಿ ನೀಡಿದ್ದು, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳು, ಹೋಬಳಿ ಮತ್ತು ಗ್ರಾಮ ಮಟ್ಟದಲ್ಲಿ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಕುರಿತು ರೈತರಿಗೆ ಪೂರಕ ಮಾಹಿತಿ ಹಾಗೂ ತಿಳುವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದರು.
ನಿನ್ನೆ ಸಂಜೆ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಕುರಿತು ಕೃಷಿ ತೋಟಗಾರಿಕೆ, ಲೀಡ್ ಬ್ಯಾಂಕ್, ವಿಮಾ ಕಂಪನಿ ಮತ್ತು ಜಿಲ್ಲಾ ಅಂಕಿಸಂಖ್ಯೆ ಇಲಾಖೆಯ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಡಿಸಿ, ಜಿಲ್ಲೆಯ ಮುಖ್ಯ ಹಾಗೂ ಇತರೆ ಬೆಳೆಗಳನ್ನು ತಾಲೂಕುವಾರು ಪರಿಗಣಿಸಿ ಆಯಾ ತಾಲೂಕಿನ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಿ ವಿವಿಧ ಆಹಾರ, ಎಣ್ಣೆಕಾಳು, ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳನ್ನು ಪಟ್ಟಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಹೇಳಿದರು.