ಬೆಂಗಳೂರು/ಧಾರವಾಡ: ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮತದಾರರಿಗೆ ಆಮಿಷ ಒಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧ ಹರಪ್ಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣ ಮತ್ತು ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಜೆ.ಪಿ. ನಡ್ಡಾ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಈ ಆದೇಶ ಮಾಡಿದೆ.
ನಡ್ಡಾ ಅವರು ಭಾಷಣದ ಮೂಲಕ ಮತದಾರರಿಗೆ ಆಮಿಷ ಮತ್ತು ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ, ಅದನ್ನು ಋಜುವಾತುಪಡಿಸುವ ಅಂಶಗಳು ದೂರುದಾರರ ಬಳಿ ಇಲ್ಲ. ನಡ್ಡಾ ಅವರ ಭಾಷಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದ್ದರ ಬಗ್ಗೆಯೂ ಪುರಾವೆಗಳಿಲ್ಲ. ಅಲ್ಲದೇ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ಅವರಿಂದ ಅನುಮತಿ ಪಡೆದುಕೊಳ್ಳುವಾಗ ಕಾನೂನು ನಿಯಮಗಳನ್ನು ಪಾಲಿಸಿಲ್ಲ. ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿದ ಕ್ರಮವೂ ದೋಷಪೂರಿತವಾಗಿದೆ ಎಂದು ನಡ್ಡಾ ಪರ ವಕೀಲರು ವಾದಿಸಿದ್ದರು. ಇದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ. ಜೆಪಿ ನಡ್ಡಾ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡಿಸಿದರು. ವಕೀಲ ಎಂ ವಿನೋದ್ ಕುಮಾರ್ ವಕಾಲತ್ತು ವಹಿಸಿದ್ದರು.