ಧಾರವಾಡ: ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರ ನೆನಪಿಗಾಗಿ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಎಸ್‌ಡಿಎಂ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸ್ವರ್ಣ ಪದಕಗಳನ್ನು ಸ್ಥಾಪಿಸಲಾಗುವುದು ಎಂದು ಅವರ ಪುತ್ರ ಪ್ರಿಯದರ್ಶಿ ಕಣವಿ ತಿಳಿಸಿದ್ದಾರೆ. ಕಳೆದ ಜನವರಿ 14 ರಿಂದ ಫೆ. 16 ರವರೆಗೆ ಡಾ. ಚೆನ್ನವೀರ ಕಣವಿ ಅವರು ತೀವ್ರ ಅನಾರೋಗ್ಯದಿಂದಾಗಿ ಎಸ್ಡಿಎಮ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಫೆ.16ರಂದು ಅವರು ಇಹಲೋಕ ತ್ಯಜಿಸಿದರು.
ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಹಾಲಪ್ಪ ಆಚಾರ್, ಶಂಕರ ಪಾಟೀಲ್ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ್, ಅಮೃತ ದೇಸಾಯಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೇರಿದಂತೆ ಎಸ್‌ಡಿಎಂ ಆಸ್ಪತ್ರೆಯ ನಿರ್ದೇಶಕರು, ವೈದ್ಯರು, ಸಿಬ್ಬಂದಿ ನೀಡಿದ ಸಹಕಾರ, ತುಂಬಿದ ನೈತಿಕ ಸ್ಥೈರ್ಯಕ್ಕೆ ಕುಟುಂಬ ಋಣಿಯಾಗಿದೆ.