ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

By ETV Bharat Karnataka Team

Published : Dec 19, 2023, 3:15 PM IST

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 6 ತಿಂಗಳ ಆಡಳಿತದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು‌ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಾಪ್ರಹಾರ ನಡೆಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಇದೆ ಎಂದು ಯಾರಿಗೂ ಅನಿಸುತ್ತಿಲ್ಲ. ನಮ್ಮ ಅವಧಿಯಲ್ಲಿ ಅನುಷ್ಠಾನಗೊಂಡ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ. ರಾಜ್ಯದ ಪ್ರಗತಿ ಶೂನ್ಯವಾಗಿದೆ ಎಂದು ಆರೋಪಿಸಿದರು.

ಪ್ರತಿ ವರ್ಷ ಬಂಡವಾಳ ವೆಚ್ಚ ಏರಿಕೆಯಾಗಬೇಕು. ಆದರೆ, ಅಧಿವೇಶನದಲ್ಲಿ‌ ಮಂಡಿಸಿದ ಮಧ್ಯಂತರ ಹಣಕಾಸು ವರದಿಯಲ್ಲಿ ಬಂಡವಾಳ ವೆಚ್ಚ ಕಳೆದ ಐದು ವರ್ಷಗಳಲ್ಲಿ‌ ಕಡಿಮೆಯಾಗಿರುವುದು ರಾಜ್ಯ ಹಣಕಾಸು ಸ್ಥಿತಿಗೆ ಹಿಡಿದ ಕನ್ನಡಿ ಎಂದು ಹೇಳಿದರು. ಕೃಷ್ಣಾ ಹಂತ 3 ಯೋಜನೆ‌ ಸೇರಿ ಬಜೆಟ್​ನಲ್ಲಿ ಘೋಷಿಸಿದ ಉತ್ತರ ಕರ್ನಾಟಕದ ವಿವಿಧ ಯೋಜನೆಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ. ನಾವು ಅಧಿಕಾರದಲ್ಲಿದ್ದಾಗ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ 22 ಸಾವಿರ ಕೋಟಿ ರೂ. ಅನುದಾನವನ್ನು ಕೊಟ್ಟಿದ್ದೆವು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ, ರಾಜ್ಯಕ್ಕೆ ಬರಬೇಕಾದ ಅನುದಾನ, ಹಣಕಾಸು ನೆರವು ನೀಡುತ್ತಿಲ್ಲ ಎಂದು ಹೇಳುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರದ ಮೇಲೆ‌ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಆಯಾ ಯೋಜನೆಗೆ ಸಂಬಂಧಿಸಿದಂತೆ ಇಲಾಖೆಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡುತ್ತಿದೆ. ಕೇಂದ್ರ ಸರ್ಕಾರ, ರಾಜ್ಯಕ್ಕೆ ನೀಡಿರುವ ಅನುದಾನ, ಪರಿಹಾರ, ಆರ್ಥಿಕ ನೆರವಿನ ಬಗ್ಗೆ ಸದ್ಯದಲ್ಲೇ ನಾವು ಲೆಕ್ಕ ಕೊಡುತ್ತೇವೆ ಎಂದು ಹೇಳಿದರು.

ಅಭಿವೃದ್ಧಿ ಯೋಜನೆಗಳ ವರದಿ ನೀಡಲಿ - ಬಸವರಾಜ ಬೊಮ್ಮಾಯಿ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳಲ್ಲಿ ಬಜೆಟ್​ನಲ್ಲಿ ಘೋಷಿಸಿರುವ ಎಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮಾಹಿತಿ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಡಿಸೆಂಬರ್-2-23) ಆಗ್ರಹಿಸಿದ್ದರು. ಮಾಧ್ಯಮಗಳ ಎದುರು ಮಾತನಾಡಿದ್ದ ಅವರು, ಈ ಸರ್ಕಾರ ಬಂದು ಆರು ತಿಂಗಳಾಯಿತು. ಈ ಸರ್ಕಾರದ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ‌. ಇವರು ಪದೇ ಪದೆ ಗ್ಯಾರಂಟಿಗಳ ಬಗ್ಗೆ ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ‌. ವಾಸ್ತವದಲ್ಲಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿಲ್ಲ ಎಂದು ಆರೋಪಿಸಿದ್ದರು.

ಇದನ್ನೂ ಓದಿ:ಸರ್ಕಾರ ಆರು ತಿಂಗಳಲ್ಲಿ ಜಾರಿಗೊಳಿಸಿದ ಅಭಿವೃದ್ಧಿ ಯೋಜನೆಗಳ ವರದಿ ನೀಡಲಿ: ಬಸವರಾಜ ಬೊಮ್ಮಾಯಿ

ABOUT THE AUTHOR

...view details