ಹುಬ್ಬಳ್ಳಿ :ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕರಿಸುತ್ತಿದಂತೆ ಬಿಜೆಪಿ ಪಾಳೆಯದಲ್ಲಿ ಹೊಸ ಹುರುಪು ಮೂಡಿ ಬಂದಿದೆ. ಚುನಾವಣಾ ವೇಳೆ ಬಿಜೆಪಿಯಿಂದ ಕಾಂಗ್ರೆಸ್ನತ್ತ ಕೆಲ ನಾಯಕರು ಮುಖ ಮಾಡಿದ್ದರು. ಅಂತಹವರಲ್ಲಿ ಕುಂದಗೋಳ ಮಾಜಿ ಶಾಸಕ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಸಂಬಂಧಿ ಎಸ್.ಐ. ಚಿಕ್ಕನಗೌಡ ಅವರು ಕೂಡ ಒಬ್ಬರು.
ಅವರು 2023 ರ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದರು. ಅದಲ್ಲದೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಚಿಕ್ಕನಗೌಡರ ಕಳೆದ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು.
ಇದೀಗ ಚಿಕ್ಕನಗೌಡರ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಅಧ್ಯಕ್ಷರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇವರ ಈ ಭೇಟಿ ಈಗ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ನೂತನ ಸಾರಥಿ ಬಿ.ವೈ. ವಿಜಯೇಂದ್ರ ಅಧ್ಯಕ್ಷರಾಗಿರುವುದರಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಚಿಕ್ಕನಗೌಡರ ಬಿಜೆಪಿಗೆ ಮರಳಿದರಾ ಎಂಬ ಊಹಾಪೋಹಕ್ಕೆ ಇಂಬು ನೀಡಿದೆ.