ಧಾರವಾಡ:ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಧಾರವಾಡ ಜಿಲ್ಲೆಯಲ್ಲೂ ಬೆಂಬಲ ವ್ಯಕ್ತವಾಗಿತ್ತು. ಇದರ ಮಧ್ಯೆ ಧಾರವಾಡ ಜಿಲ್ಲಾ ಆಸ್ಪತ್ರೆ ಸಿಬ್ಬಂದಿ ತಮ್ಮ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ಪ್ರಜ್ಞೆ ಮೆರೆದರು. ಕರ್ತವ್ಯ ಪ್ರಜ್ಞೆ ಮೆರೆದಿರುವುದರ ಜೊತೆಗೆ ಮುಷ್ಕರಕ್ಕೂ ಬೆಂಬಲ ಸೂಚಿಸಿ ಕಪ್ಪು ಪಟ್ಟಿ ಕಟ್ಟಿಕೊಂಡು ರೋಗಿಗಳಿಗೆ ಅನಾನುಕೂಲವಾಗಬಾರದು ಎಂದು ಜಿಲ್ಲಾಸ್ಪತ್ರೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಧಾರವಾಡ ಜಿಲ್ಲಾ ಆಸ್ಪತ್ರೆಯ ಓಪಿಡಿ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ.
ತುರ್ತು ಚಿಕಿತ್ಸಾ ವಿಭಾಗ, ತೀವ್ರ ನಿಗಾ ಘಟಕ, ಡಯಾಲಿಸಿಸ್, ತುರ್ತು ಚಿಕಿತ್ಸಾ ಘಟಕ, ಹೆರಿಗೆ ವಾರ್ಡ್ ಸೇರಿದಂತೆ ಅನೇಕ ವಾರ್ಡ್ಗಳಲ್ಲಿ ಸರ್ಕಾರಿ ನೌಕರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಆಸ್ಪತ್ರೆ ಹೊರತುಪಡಿಸಿ ಉಳಿದೆಲ್ಲ ಸರ್ಕಾರಿ ಕಚೇರಿಗಳ ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ರಾಜ್ಯಾದ್ಯಂತ ನಡೆಸುತ್ತಿರುವ ಮುಷ್ಕರಕ್ಕೆ ಸಂಪೂರ್ಣವಾಗಿ ಬೆಂಬಲ ಸೂಚಿಸಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಹಾಜರಾಗದೇ ಮುಷ್ಕರ ನಡೆಸಿದ್ದಾರೆ.
ಧಾರವಾಡದ ಎಲ್ಲಾ ಸರ್ಕಾರಿ ಕಚೇರಿಗಳು ಸಂಪೂರ್ಣವಾಗಿ ಬಾಗಿಲು ಮುಚ್ಚಿವೆ. ನಿತ್ಯ ಜನಜಂಗುಳಿಯಿಂದ ಕೂಡಿರುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಕೂಡ ನೌಕರರಿಲ್ಲದೆ ಬಿಕೋ ಎನ್ನುತ್ತಿದೆ. ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ವಿಭಾಗಗಳ ನೌಕರರು ತಮ್ಮ ಕಚೇರಿಗೆ ಬೀಗ ಹಾಕಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರಿಂದ ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ಗೇಟ್ ಒಂದು ತೆರೆದಿದ್ದು ಹೊರತುಪಡಿಸಿದರೆ ಉಳಿದೆಲ್ಲ ವಿಭಾಗಗಳು ಸಂಪೂರ್ಣ ಬಂದ್ ಆಗಿ ಕಚೇರಿ ಬಿಕೋ ಎನ್ನುತ್ತಿದ್ದವು.
ಸರ್ಕಾರಿ ನೌಕರರ ಪ್ರತಿಭಟನೆ ಹಿನ್ನೆಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ:ಏಳನೇ ಪರಿಷ್ಕೃತ ವೇತನಕ್ಕೆ ಆಗ್ರಹಿಸಿ ಸರ್ಕಾರಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟ ಮುಷ್ಕರ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡಿದರು. ಮುಷ್ಕರಕ್ಕೆ ಬೆಂಬಲ ಸೂಚಿಸಿರುವ ಸರ್ಕಾರಿ ನೌಕರರು ಸೇವೆಯಿಂದ ದೂರ ಉಳಿದಿದ್ದರಿಂದ ಗುತ್ತಿಗೆ ಆಧಾರದ ಸಿಬ್ಬಂದಿಯಿಂದ ಕಿಮ್ಸ್ ಆಸ್ಪತ್ರೆಯ ಆಡಳಿತ ಮಂಡಳಿ ಓಪಿಡಿ ಸೇವೆಯನ್ನು ನೀಡಲಾಗುತ್ತಿದೆ.
ಹೊರ ರೋಗಿಗಳ ವಿಭಾಗವನ್ನು ಬಂದ್ ಮಾಡಿ ಕಿಮ್ಸ್ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಐಸಿಯು ಮತ್ತು ತುರ್ತು ಚಿಕಿತ್ಸಾ ಘಟಕ ಮಾತ್ರ ಓಪನ್ ಆಗಿದ್ದು, ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲ ಸಿಬ್ಬಂದಿ ತುರ್ತು ಸೇವೆ ನೀಡುತ್ತಿದ್ದಾರೆ. ಇದರಿಂದ ಕಿಮ್ಸ್ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರಿ ನೌಕರರ ಕೊರತೆ ಕಂಡುಬಂತು.