ಧಾರವಾಡ: ಸಾರ್ವಜನಿಕರು ಉದಾಸೀನತೆ ಮಾಡಿ, ಕೋವಿಡ್ ಗಂಭೀರತೆಯನ್ನು ಅರ್ಥೈಸಿಕೊಳ್ಳದಿರುವುದರಿಂದ ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಇಂದು ಜಿಲ್ಲೆಯ ವಿವಿಧ ವಿದ್ಯಾರ್ಥಿ ನಿಲಯಗಳ 30 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ವಿದ್ಯಾರ್ಥಿಗಳು, ಯುವಕರು ಮತ್ತು ಎಲ್ಲ ರೀತಿಯ ಸಾರ್ವಜನಿಕರು ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಸಂಚರಿಸುವ ಮೂಲಕ ಸಹಕಾರ ನೀಡಬೇಕು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡದ ಸಪ್ತಾಪೂರ ಪ್ರದೇಶದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಗೌರಿಶಂಕರ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ 10 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ. ಜಂಟಿ ನಿರ್ದೇಶಕ ಎನ್.ಆರ್.ಪುರೋಷತ್ತಮ ಇಂದು ವಸತಿನಿಲಯ 1 ಮತ್ತು 2 ರಲ್ಲಿ ಇರುವ ಸುಮಾರು 530 ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯ ಸಹಕಾರದಲ್ಲಿ ಆರ್‍ಟಿಪಿಸಿಆರ್ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ. ಪಾಸಿಟಿವ್ ದೃಢಪಟ್ಟಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕರ್ನಾಟಕ ಕಾಲೇಜಿನ ಕಾವೇರಿ ವಿದ್ಯಾರ್ಥಿನಿಲಯದಲ್ಲಿನ ವಿದ್ಯಾರ್ಥಿನಿಯರಿಗೆ ಇತ್ತೀಚೆಗೆ ಆರೋಗ್ಯ ಇಲಾಖೆಯಿಂದ ಆರ್‍ಟಿಪಿಸಿಆರ್ ಮೂಲಕ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ 7 ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ವರದಿ ಬರುವ ಪೂರ್ವದಲ್ಲಿ ವಿದ್ಯಾರ್ಥಿನಿಯರು ತಮ್ಮ ಸ್ವಗ್ರಾಮಗಳಿಗೆ ತೆರಳಿದ್ದು, ಸಂಬಂಧಿಸಿದವರಿಗೆ ವರದಿ ಮತ್ತು ಮಾಹಿತಿ ನೀಡಲಾಗಿದೆ. ಮತ್ತು ಉಳಿದ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ.