ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ನಡೆಯಲಿರುವ ಹುಬ್ಬಳ್ಳಿ ಜಗ್ಗಲಗಿ ಹಬ್ಬದ ಪೋಸ್ಟರ್ ಹಾಗೂ ಸಾಕ್ಷ್ಯಚಿತ್ರವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಪ್ರತಿ ವರ್ಷದಂತೆ ಹುಬ್ಬಳ್ಳಿ ಜಗ್ಗಲಗಿ ಹಬ್ಬವನ್ನು ಮಾ.11 ರಂದು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಈಗಾಗಲೇ ಸಿದ್ಧತೆ ಕಾರ್ಯ ಭರದಿಂದ ಸಾಗಿದೆ. ದೇಶಿಯ ಆಟಗಳು ಕಡಿಮೆ ಆಗುತ್ತಿರುವ ಸಂದರ್ಭದಲ್ಲಿ ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವ ದೃಷ್ಟಿಯಿಂದ ಬಿಜೆಪಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದೀಗ ಹುಬ್ಬಳ್ಳಿ ಜಗ್ಗಲಗಿ ಹಬ್ಬದ ಮೂಲಕ ನಮ್ಮ ಸಂಸ್ಕೃತಿಯನ್ನು ಉತ್ತೇಜಿಸುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಲೋಕಾಯುಕ್ತವನ್ನು ಹಲ್ಲಿಲ್ಲದ ಹಾವು ಮಾಡಿತ್ತು:ಲೋಕಾಯುಕ್ತವನ್ನು ಬಲಗೊಳಿಸಿದ್ದೆ ಬಿಜೆಪಿ. ಹೀಗಾಗಿ ಯಾವುದೇ ಪಕ್ಷದ ನಾಯಕರು ತಪ್ಪು ಮಾಡಿದರೂ ಸಹ ಅವರ ವಿರುದ್ಧ ಕ್ರಮ ಆಗಲಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಕಾಂಗ್ರೆಸ್ ಲೋಕಾಯುಕ್ತವನ್ನು ಹಲ್ಲಿಲ್ಲದ ಹಾವು ಮಾಡಿತ್ತು. ಇದೀಗ ನಮ್ಮ ಕಾಲದಲ್ಲಿಯೇ ಲೋಕಾಯುಕ್ತವನ್ನು ಬಲಗೊಳಿಸಿದ್ದೇವೆ. ಯಾರು ಕಳಂಕಿತರಿರುತ್ತಾರೆ ಅವರ ವಿರುದ್ಧ ಕ್ರಮ ಆಗಲಿದೆ ಎಂದರು.
ಮೋದಿ ರಾಜ್ಯಕ್ಕೆ ಬಂದರೆ ಸಿದ್ದರಾಮಯ್ಯ ಅವರಿಗೆ ಭಯಾ ಆಗುತ್ತದೆ:ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದರೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, ಮೋದಿ, ಅಮಿತ್ ಶಾ ರಾಜ್ಯಕ್ಕೆ ಬಂದರೆ ಸಿದ್ದರಾಮಯ್ಯ ಅವರಿಗೆ ಭಯಾ ಆಗುತ್ತದೆ. ಈ ಹಿಂದೆ ನರೇಂದ್ರ ಮೋದಿ ಅವರು ಗುಜರಾತ್ ಬಿಟ್ಟು, ರಾಷ್ಟ್ರೀಯ ರಾಜಕಾರಣ ಪ್ರವೇಶದ ನಂತರ ಸಿದ್ದರಾಮಯ್ಯ ಎಲ್ಲಾ ಚುನಾವಣೆ ಸೋತಿದ್ದಾರೆ. 2018ರಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಯಿತು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಸೋಲು ಅನುಭವಿಸಿದರು. ಮೂರು ಬಾರಿ ಸೋತವರು ರಾಜಕಾರಣವನ್ನು ಬಿಟ್ಟು ಹೋಗಬೇಕಿತ್ತು. ಈಗ ಕೊನೆಯ ಬಾರಿಗೆ ಡಿ.ಕೆ. ಶಿವಕುಮಾರ್ ಜೊತೆ ಕಂಪಿಟೇಷನ್ಗೆ ಬಿದ್ದಿದ್ದಾರೆ, ಅವರಿಬ್ಬರಿಗೆ ದೇವರು ಸದ್ಬುದ್ಧಿ ಕೊಡಲಿ, ಒಳ್ಳೆಯದು ಮಾಡಲಿ ಎಂದು ಹೇಳಿದರು.