ಹುಬ್ಬಳ್ಳಿ:ನಗರದಲ್ಲಿ ಉತ್ತರ ಕರ್ನಾಟಕದ ಪ್ರಸಿದ್ದ ಶ್ರೀ ಸಿದ್ಧಾರೂಢ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರೆವೇರಿತು. ಸಿದ್ಧಾರೂಢ ಮಠ ಟ್ರಸ್ಟ್ ಕಮಿಟಿ ಆಶ್ರಯದಲ್ಲಿ ಮಹಾಶಿವರಾತ್ರಿ ಮಹೋತ್ಸವದ ನಿಮಿತ್ತ ಜರುಗಿದ ಸಿದ್ಧಾರೂಢ ಸ್ವಾಮಿಯ ರಥೋತ್ಸವ ಭಾನುವಾರ ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ಮುಂದೆ ಸಾಗಿತು.
ಸಿದ್ಧಾರೂಢರ ರಥ ದೇವಸ್ಥಾನದ ಮುಖ್ಯ ಬೀದಿಯಲ್ಲಿ ಸಾಗುತ್ತಿದ್ದಂತೆ ಅಪಾರ ಭಕ್ತಾದಿಗಳು ಹರ ಹರ ಮಹಾದೇವ ಘೋಷಣೆ ಮಾಡುತ್ತ, ಉತ್ತತ್ತಿ, ಬಾಳೆಹಣ್ಣು, ನಿಂಬೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಭಕ್ತರು ರಥೋತ್ಸವದ ಸಂಭ್ರಮವನ್ನೂ ಕಣ್ತುಂಬಿಕೊಂಡರು.
ಜಾತ್ರೆ ಕಳೆ ಹೆಚ್ಚಿಸಿದ ಮಂಗಳವಾದ್ಯ:ಡೊಳ್ಳು, ಬ್ಯಾಂಜೋ ಸೇರಿದಂತೆ ವಿವಿಧ ವಾದ್ಯ-ಮೇಳಗಳೊಂದಿಗೆ ಸಾಗಿದ ಯುವ ಸಮೂಹ ನೃತ್ಯ ಮಾಡುವ ಮೂಲಕ ಜಾತ್ರೆಯ ಸಂಭ್ರಮವನ್ನೂ ಇಮ್ಮಡಿಗೊಳಿಸಿತು. ತೇರು ಮುಂದೆ ಸಾಗುತ್ತಿದ್ದಂತೆ ಓಂ ನಮಃ ಶಿವಾಯ , ಹರ ಹರ ಮಹಾದೇವ ಎಂಬ ಭಕ್ತರ ಉದ್ಗಾರ ಮೊಳಗಿತು.
ಜಾತಿ, ಧರ್ಮದ ಸಂಕೋಲೆ ಮೀರಿದ ಜಾತ್ರೆ:ಶ್ರೀ ಸಿದ್ಧಾರೂಢ ಹಾಗೂ ಗುರುನಾಥಾರೂಢರ ಉತ್ಸವ ಮೂರ್ತಿಗಳನ್ನೂ ಅಲಂಕೃತ ತೇರಿನಲ್ಲಿಟ್ಟು ಎಳೆಯಲಾಯಿತು. ಜಾತಿ, ಧರ್ಮದ ಸಂಕೋಲೆಗಳನ್ನು ಮೀರಿ ಸರ್ವ ಜನಾಂಗದವರು ರಥೋತ್ಸವದಲ್ಲಿ ಭಾಗಿಯಾಗಿದ್ದರು. ಟೆಂಪೊ, ಟ್ರ್ಯಾಕ್ಟರ್, ದ್ವಿಚಕ್ರ, ಕಾರುಗಳಲ್ಲಿ ಮಾತ್ರವಲ್ಲದೆ, ಪಾದಯಾತ್ರೆ ಮೂಲಕವೂ ರಾಜ್ಯದ ವಿವಿಧ ಭಾಗದಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು.
ಇನ್ನು ಮಹಾರಾಷ್ಟ್ರ, ಆಂಧ್ರಪ್ರದೇಶ, ಗೋವಾ ಸೇರಿದಂತೆ ರಾಜ್ಯದ ಹುಬ್ಬಳ್ಳಿ-ಧಾರವಾಡ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಕಲಬುರಗಿ, ಹಾವೇರಿ, ಗದಗ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತಾರು ರಥೋತ್ಸವದಲ್ಲಿ ಪಾಲ್ಗೊಂಡು, ಪುನೀತರಾದರು.