ಹುಬ್ಬಳ್ಳಿ:ರಾಜ್ಯಾದ್ಯಂತ ಜೂನ್ 11ರಿಂದ ಆರಂಭಿಸಲಾಗಿರುವ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ದಿನದಿಂದ ದಿನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರು ಪ್ರಯಾಣದ ಸಮಯದಲ್ಲಿ ಸುರಕ್ಷತೆಯ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
12.72 ಲಕ್ಷಕ್ಕೆ ತಲುಪಿದ ಮಹಿಳಾ ಪ್ರಯಾಣಿಕ ಸಂಖ್ಯೆ:ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆರಂಭಿಸಿರುವ ರಾಜ್ಯದೊಳಗೆ ಮಹಿಳೆಯರಿಗೆ ಉಚಿತ ಪ್ರಯಾಣದ ಮಹತ್ವಾಕಾಂಕ್ಷಿ ಯೋಜನೆಗೆ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗುತ್ತಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರಕನ್ನಡ 6 ಜಿಲ್ಲೆಗಳ 9 ಸಾರಿಗೆ ವಿಭಾಗಗಳ ಬಸ್ಸುಗಳಲ್ಲಿ ಯೋಜನೆಯ ಆರಂಭದ ದಿನ ಜೂನ್ 11ರಂದು ಮಧ್ಯಾಹ್ನ 1ರಿಂದ ರಾತ್ರಿ 12 ರವರೆಗೆ 1.22 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದರು. ಮಹಿಳೆಯರ ಸಂಖ್ಯೆ ಹೆಚ್ಚಾಗುತ್ತಿದ್ದು, ಬುಧವಾರ ಜೂನ್ 14ರಂದು 12.72 ಲಕ್ಷಕ್ಕೆ ತಲುಪಿದೆ ಎಂದು ಮಾಹಿತಿ ನೀಡಿದ್ದಾರೆ.
ಮಹಿಳೆಯರು ಸೇರಿದಂತೆ, ಸಾರ್ವಜನಿಕರಿಗೆ ಸುರಕ್ಷಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಕಚೇರಿಯ ಹಿರಿಯ ಅಧಕಾರಿಗಳು ನಿರಂತರವಾಗಿ ಎಲ್ಲಾ ವಿಭಾಗಗಳ ನಿಯಂತ್ರಣಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಭೆಗಳನ್ನು ನಡೆಸಲಾಗುತ್ತಿದೆ. ಪರಿಸ್ಥಿತಿ ಅವಲೋಕನ ಮಾಡಿ ಸಕಾಲಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮಹಿಳೆಯರು ಸೇರಿದಂತೆ ಎಲ್ಲ ಪ್ರಯಾಣಿಕರೊಂದಿಗೆ ಸೌಜನ್ಯತೆಯಿಂದ ವರ್ತಿಸುವಂತೆ ಚಾಲಕ ಹಾಗೂ ನಿರ್ವಾಹರಿಗೆ ಸೂಚನೆಗಳನ್ನು ನೀಡಲಾಗಿದೆ. ಬೆಳಿಗ್ಗೆ ಹಾಗೂ ಸಾಯಂಕಾಲ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಮಯದಲ್ಲಿ ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ಸುಗಳ ಸುಗಮ ಕಾರ್ಯಾಚರಣೆ ಮೇಲ್ವಿಚಾರಣೆಗಾಗಿ ಬಸ್ ನಿಲ್ದಾಣಗಳಿಗೆ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾನೂನು ಮತ್ತು ಸುರಕ್ಷತೆಯ ದೃಷ್ಡಿಯಿಂದ ಬಸ್ ನಿಲ್ದಾಣಗಳಿಗೆ ಪೊಲೀಸ್ ಇಲಾಖೆಯಿಂದ ಸಿಬ್ಬಂದಿ ನಿಯೋಜನೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.