ಹುಬ್ಬಳ್ಳಿ: ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನರ್ಹ ಶಾಸಕರ ತ್ಯಾಗದಿಂದ. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಿಜ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅನರ್ಹ ಶಾಸಕರಿಂದ ನಮ್ಮ ಸರ್ಕಾರ ಬಂದಿದೆ ಎಂಬ ಸಿಎಂ ಬಿಎಸ್ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅನರ್ಹ ಶಾಸಕರು ಬಿಜೆಪಿಯವರನ್ನು ನಂಬಿ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ಮುಖ್ಯಮಂತ್ರಿಗಳ ಅನರ್ಹರ ಪರ ಹೇಳಿಕೆಗೆ ನನ್ನ ಸಹಮತವಿದೆ ಎಂದರು.
ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್ವೈ ಸರ್ಕಾರದ ಸ್ಥಿರತೆ ಬಗ್ಗೆ ಮಾತನಾಡಿರಬಹುದು. ಅಲ್ಲದೇ ಬಿಜೆಪಿಗೆ ಬೆಂಬಲ ನೀಡುವುದರ ಬಗ್ಗೆಯೂ ಚರ್ಚೆ ನಡೆದಿರಬಹುದು. ರಾಜಕೀಯದಲ್ಲಿ ಯಾರು ಶಾಶ್ವತ ಗೆಳೆಯರಲ್ಲ ಎಂದ ಅವರು, ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರು ಚುನಾವಣೆ ಬೇಡ ಎಂದು ಹೆಚ್ಡಿಕೆ ಹೇಳಿದ್ದಾರೆ. ಅದಕ್ಕೆ ಬಿಜೆಪಿಗೆ ಬೆಂಬಲ ಸೂಚಿಸಲು ತಿರ್ಮಾನಿಸಿರಬಹುದು. ಈ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದ ತೆಗೆದುಹಾಕುವ ವಿಚಾರ ತಪ್ಪು. ಇದರ ಪರಿಣಾಮ ಮಕ್ಕಳ ಮೇಲೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಪಾಠ ಮಾಡಬೇಕಾ, ಅಥವಾ ಬೇಡವಾ ಎಂಬ ಆತಂಕದಲ್ಲಿ ಇರುವಂತಾಗುತ್ತದೆ. ತಕ್ಷಣವೇ ಇತಿಹಾಸ ತಜ್ಞರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದರು.