ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಿಗೆ ಹಿಂದೂ ಪದವೇ ಅಲರ್ಜಿಯಾಗಿದೆ. ಚುನಾವಣೆ ಹತ್ತಿರ ಬಂದಾಗ ಚರ್ಚೆ ಆಗದ ವಿಷಯಗಳನ್ನು ತಂದಿರುವುದೇ ಅವರ ಅಜ್ಞಾನವನ್ನು ತೋರಿಸುತ್ತದೆ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂದೂ ಪದದ ಕುರಿತು ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹರಿಹಾಯ್ದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಪರಂಪರೆ, ಸಂಸ್ಕೃತಿಯನ್ನು ಟೀಕಿಸಿದಾಗಲೇ ಸಮಾಧಾನ ಆಗುತ್ತದೆ. ಹಿಂದೂಗಳ ವಿರೋಧಿ ಎಂದು ತೋರಿಸಿಕೊಂಡು ಅಲ್ಪಸಂಖ್ಯಾತರನ್ನು ಓಲೈಸಿ ಅವರ ಮತಗಳನ್ನು ಸೆಳೆಯುವ ಸಲುವಾಗಿ ಈ ತರಹದ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿಗೆ ತಾವು ಕೂಡ ಹಿಂದೂ ಎಂಬ ವಿಷಯ ನೆನಪಿಗೆ ಬಂದಿದೆ. ಹಿಂದೂಗಳ ಮತಗಳು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಜನಿವಾರ ತೋರಿಸಿ ನಾನು ಹಿಂದೂ ಎಂದು ಹೇಳಲು ಪ್ರಾರಂಭಿಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ಮಾಡುವುದೇ ಅನಾವಶ್ಯಕ. ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಆಗುತ್ತಿದೆ. ಇದು ಸರಿಯಲ್ಲ ಎಂದರು.