ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಯಾ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಸಿ ಮಹಿಳೆ ಹಾಗೂ ಕುಟುಂಬ ಸದಸ್ಯರು ಕಿಮ್ಸ್ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿದರು.
ಕಿಮ್ಸ್ ಮುಂದೆ ಮಹಿಳೆ ಪ್ರತಿಭಟನೆ ಲಲಿತಾ ಬಿಸ್ಟಪ್ಪನವರ ಎಂಬುವವರೇ ಪ್ರತಿಭಟನೆ ನಡೆಸುತ್ತಿರುವ ಮಹಿಳೆ. ಕಿಮ್ಸ್ ಆಸ್ಪತ್ರೆಯಲ್ಲಿ ಸುಮಾರು ವರ್ಷಗಳಿಂದ ಕಡಿಮೆ ವೇತನಕ್ಕೆ ದುಡಿಯುತ್ತಿದ್ದು, ಕ್ಷುಲ್ಲಕ ಕಾರಣಕ್ಕೆ ನನ್ನನ್ನು ಕೆಲಸದಿಂದ ತೆಗೆದಿರುವುದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ.
ಕಿಮ್ಸ್ ಆಸ್ಪತ್ರೆಯಲ್ಲಿ ದುಡಿದು ಉಪಜೀವನ ನಡೆಸುತ್ತಿದ್ದೆ. ಅಲ್ಲದೇ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಸಾಕಷ್ಟು ಸಮಸ್ಯೆಗಳನ್ನು ಅನುಭವಿಸಿದ್ದೇನೆ. ಈ ಬಗ್ಗೆ ಕಿಮ್ಸ್ ಆಡಳಿತ ಮಂಡಳಿ ಬಳಿ ಮಾತನಾಡಿದರೂ ಕೆಲಸಕ್ಕೆ ಸೇರಿಸಿಕೊಳ್ಳುತ್ತಿಲ್ಲ ಎಂದು ಪ್ರತಿಭಟನಾನಿರತ ಮಹಿಳೆ ಹೇಳಿಕೊಂಡಿದ್ದಾರೆ.
ಇನ್ನೂ ಕೆಲಸಕ್ಕೆ ಸೇರಿಸಿಕೊಳ್ಳುವ ವರೆಗೂ ನನ್ನ ಪ್ರತಿಭಟನೆ ಹಿಂದೆಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದು, ಕುಟುಂಬಸ್ಥರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.