ಹುಬ್ಬಳ್ಳಿ: ಆಶ್ರಯ ಯೋಜನೆ ಮನೆಗಳ ಕಾಮಗಾರಿ ಸಂಪೂರ್ಣ ಮುಕ್ತಾಯ ಹಂತಕ್ಕೆ ಬಂದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಫಲಾನುಭವಿಗಳಿಗೆ ಲಭ್ಯವಾಗಲಿವೆ ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಅರವಿಂದ್ ಬೆಲ್ಲದ ಹೇಳಿಕೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿರಹಿತ ಕೊಳೆಗೇರಿ ನಿವಾಸಿಗಳಿಗೆ ಆಶ್ರಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿಯನ್ನು ಕಳೆದ ಎರಡುಮೂರು ವರ್ಷಗಳ ಹಿಂದೆಯೇ ಭೂಮಿ ಪೂಜೆ ಮಾಡಲಾಗಿತ್ತು. ಆದರೆ ಆ ಸಮಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರಿಂದ ಅನುದಾನ ನೀಡೋದನ್ನು ತಡೆ ಹಿಡಿದಿದ್ದರು.
ನಂತರ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸಮರ್ಪಕ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಸಂಪೂರ್ಣವಾಗಿ ಮುಗಿಸಿದ್ದೇವೆ. ಮುಂದಿನ ಕೆಲವೇ ದಿನಗಳಲ್ಲಿ ಆಶ್ರಯ ಮನೆಗಳ ಉಪಯೋಗವನ್ನು ಫಲಾನುಭವಿಗಳು ಪಡೆಯಲಿದ್ದಾರೆ ಎಂದು ತಿಳಿಸಿದರು.
ಹು-ಧಾ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಬಂಡಾಯ ಎದ್ದು ಸ್ಪರ್ಧೆ ಮಾಡಿದಂತಹ ಅಭ್ಯರ್ಥಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ಪ್ರತಿಕ್ರಿಯಿಸಿದ ಅವರು, ವಾರ್ಡ್ ಭಾಗದಲ್ಲಿ ಸ್ಥಳೀಯರ ಸಲಹೆ ಪಡೆದು ಪಕ್ಷದ ಮುಖಂಡರು ತೀರ್ಮಾನ ತೆಗೆದುಕೊಳ್ಳುತ್ತಾರೆ.
ನಾವು ಯಾವ ಅಭ್ಯರ್ಥಿಗೂ ಟಿಕೆಟ್ ಕೊಡ್ತೇವೆ ಎಂದು ಆಶ್ವಾಸನೆ ನೀಡಿರಲಿಲ್ಲ. ಆದರೆ ಆಕಾಂಕ್ಷಿಗಳ ಸಂಖ್ಯೆಯೇ ಹೆಚ್ಚಾಗಿದ್ದರಿಂದ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಉಂಟಾಗಿತ್ತು. ಆದ್ದರಿಂದ ಕೆಲವರು ಪಕ್ಷದ ವಿರುದ್ಧ ಬಂಡಾಯ ಎದ್ದು ಸ್ಪರ್ಧೆ ಮಾಡಿದ್ದರು. ಅಂಥವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕುರಿತು ತೀರ್ಮಾನ ಮಾಡಲಾಗುವುದು ಎಂದರು.