ಹುಬ್ಬಳ್ಳಿ :ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಧ್ಯಮದಲ್ಲಿ ವರದಿಗಳಾಗಿದ್ದು, ಈ ಕುರಿತು ಮಾಹಿತಿ ಇಲ್ಲ. ಆದರೆ, ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹೇಳಿದರು. ನಗರದ ರೈಲ್ವೆ ನಿಲ್ದಾಣದ ಬಳಿಯಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಯೂ ಸಹ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.
ಇನ್ನು ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತವಾಗಿ ಎಲ್ಲ ನಾಯಕರೊಂದಿಗೆ ಇಂದು ವಿವೇಕಾನಂದ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದೇನೆ. ನನ್ನೊಂದಿಗೆ ಮಹೇಶ ತೆಂಗಿನಕಾಯಿ ಸೇರಿದಂತೆ ಇನ್ನಿತರ ನಾಯಕರು ಸಾತ್ ನೀಡಿದರು. ಸ್ವಾಮಿ ವಿವೇಕಾನಂದರು ಸಾಮಾಜಿಕವಾಗಿ ಎಲ್ಲರಿಗೂ ಪ್ರೇರಣೆ ಕೊಡುವ ಕೆಲಸ ಮಾಡಿದ್ದಾರೆ ಎಂದರು.
ಕತ್ತಲೆಯಿಂದ ಬೆಳಕಿನ ಅಗಾಧ ಶಕ್ತಿ ಹೊಂದಿದ್ದವರು ವಿವೇಕಾನಂದರು. ಅವರ ಜನ್ಮದಿನ ನಿಮಿತ್ತ ಹು-ಧಾ ಅವಳಿನಗರದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ಆಚರಣೆ ಮಾಡಲಾಗುತ್ತಿದೆ. ಇದೊಂದು ಅವಿಸ್ಮರಣೀಯ ಕಾರ್ಯಕ್ರಮ ಆಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು. ಬಹುತೇಕ ರಾಜಕೀಯ ಪಕ್ಷಗಳು ಜನರನ್ನು ಕರೆದುಕೊಂಡು ಕಾರ್ಯಕ್ರಮ ಮಾಡುವ ಕೆಲಸ ಹೆಚ್ಚಾಗಿವೆ. ಆದರೆ ಯುವ ಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಜನರನ್ನು ನಿಯಂತ್ರಣ ಮಾಡೋದೇ ದೊಡ್ಡ ಸಮಸ್ಯೆ ಆಗುತ್ತಿದೆ ಎಂದು ಹೇಳಿದರು.
ಫೆ. 2 ರಿಂದ ಹುಬ್ಬಳ್ಳಿ-ಪುಣೆ ವಿಮಾನ ಯಾನ ಆರಂಭವಾಗಲಿದ್ದು, ಅದು ಸದ್ಯ ಎರಡು ದಿನಗಳಿದ್ದು ಅದನ್ನು ಮುಂದಿನ ದಿನಗಳಲ್ಲಿ ವಿಸ್ತರಣೆ ಮಾಡಲು ಕೇಂದ್ರ ಸಚಿವ ರಾಜನಾಥಸಿಂಗ್ ಅವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದರು.