ಹುಬ್ಬಳ್ಳಿ: ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ, ದೇಶದಲ್ಲಿ ಭ್ರಷ್ಟಾಚಾರದ ಹೆಸರು ಬಂದಿದ್ದೇ ಕಾಂಗ್ರೆಸ್ ಪಕ್ಷದಿಂದ. ಹೀಗಾಗಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಭ್ರಷ್ಟಾಚಾರದ ಆರೋಪದಲ್ಲಿ ಹುರುಳಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಇಂದು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡಲು ಹೊರಟಿದೆ. ಆದರೆ, ಅದೇ ಕಾಂಗ್ರೆಸ್ ಪಕ್ಷ ಹತ್ತಾರು ವರ್ಷಗಳಿಂದ ಭ್ರಷ್ಟಾಚಾರ ಮಾಡಿದೆ. ಹೀಗಾಗಿ ಸುಮ್ಮನೆ ನಮ್ಮ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ಇದೀಗ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಂಗ್ರೆಸ್ ಪಕ್ಷದ ಏಜೆಂಟರ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಇದಕ್ಕೆ ಪುರಾವೆ ಸಾಕ್ಷ್ಯಗಳಿದ್ದರೇ ಒದಗಿಸಲಿ ಎಂದು ಒತ್ತಾಯಿಸಿದರು.
ಪ್ರಧಾನಿ ಮೋದಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿದ್ದಾರೆ: ಭ್ರಷ್ಟಾಚಾರದ ಸೂತ್ರದಾರರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಪ್ರಧಾನಮಂತ್ರಿ ಆಗಿದ್ದ ಅವಧಿಯಲ್ಲಿ ಮತ್ತು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಕಾಲದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಇದೀಗ ಕಾಂಗ್ರೆಸ್ ಮಾಡುತ್ತಿರುವ ಅಪಾದನೆಗಳು ಕೇವಲ ಚುನಾವಣೆ ಗಿಮಿಕ್. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದಲ್ಲಿ ಕೂದಲೆಳೆಯಷ್ಟು ಭ್ರಷ್ಟಾಚಾರ ಮಾಡದೇ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸ್ವತಃ ಬೇಲು ಪಡೆದು ಜೈಲಿನಿಂದ ಹೊರಗಿದ್ದಾರೆ. ಅವೆಲ್ಲವನ್ನೂ ಮರೆಮಾಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದಕ್ಕೆ ನಾವು ಯಾವುದೇ ಸೊಪ್ಪು ಹಾಕುವುದಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಹಿಟ್ಲರ್ ಎಂಬ ಶಬ್ದ ಬಳಕೆ ಮಾಡುತ್ತಿದ್ದಾರೆ. ಬಿಜೆಪಿಯ ಅನೇಕ ನಾಯಕರ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಉನ್ನತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸಣ್ಣತನ ಪ್ರದರ್ಶನ ಮಾಡುವುದನ್ನು ಬಿಡಬೇಕು ಎಂದು ಕುಟುಕಿದರು.