ಹುಬ್ಬಳ್ಳಿ :ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಲು ಹಾಗೂ ನಗದು ರಹಿತ ವ್ಯವಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಯುಪಿಐ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ. ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಮಾರ್ಗದರ್ಶನದಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಪ್ರಯಾಣದ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ.
ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ನಗದುರಹಿತ ವ್ಯವಹಾರವನ್ನು ಉತ್ತೇಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ನಗರದಲ್ಲಿ ನಗದುರಹಿತ ಹಣ ಪಾವತಿ ವ್ಯವಸ್ಥೆ ಆರಂಭಿಸಲಾಗಿದೆ. ಚಿಲ್ಲರೆ ಸಮಸ್ಯೆ ಪರಿಹಾರ, ಸಮಯದ ಉಳಿತಾಯ ಹಾಗೂ ಪ್ರಯಾಣದಲ್ಲಿ ನಗದು ತೆಗೆದುಕೊಂಡು ಹೋಗಬೇಕಾದ ಅವಶ್ಯಕತೆ ಇರುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಹಾಗೂ ನಿರ್ವಾಹಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 4,830 ಬಸ್ಗಳಿದ್ದು, 4,359 ಅನುಸೂಚಿಗಳ ಮೂಲಕ ಪ್ರತಿದಿನ 15 ಲಕ್ಷ ಕಿಲೋಮೀಟರ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಗೆ ಮೊದಲು ನಿತ್ಯ 17.48 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಶಕ್ತಿ ಯೋಜನೆ ಜಾರಿಯಾದ ನಂತರ ಪ್ರಯಾಣಿಕರ ಸಂಖ್ಯೆ 24 ರಿಂದ 26 ಲಕ್ಷಕ್ಕೆ ಹೆಚ್ಚಳವಾಗಿದೆ ಎಂದರು.
ಆರಂಭದಲ್ಲಿ ಪ್ರಾಯೋಗಿಕವಾಗಿ ಹುಬ್ಬಳ್ಳಿ ಗ್ರಾಮಾಂತರ 3ನೇ ಡಿಪೋ ಬಸ್‌ಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಇದರ ಸಾಧಕ-ಬಾಧಕಗಳು ಹಾಗೂ ಸಾರ್ವಜನಿಕ ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ, ಇತರೆ ಬಸ್ಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆ ಮುಖ್ಯಸ್ಥ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಹೆಚ್.ರಾಮನಗೌಡರ್ ತಿಳಿಸಿದ್ದಾರೆ.