ಹುಬ್ಬಳ್ಳಿ:ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲೂಎಸ್) ಗೆ ಶೇ.10 ರಷ್ಟು ಮೀಸಲಾತಿ ಕುರಿತಾಗಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಇನ್ನೂ ನೋಡಿಲ್ಲ. ನೋಡಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ನನಗೆ ಗೊತ್ತಿರುವ ಪ್ರಕಾರ ಸಂವಿಧಾನದ ಆರ್ಟಿಕಲ್ 15 & 16ರಡಿ ಆರ್ಥಿಕ ದುರ್ಬಲರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಈ ಕುರಿತು ಮಾಧ್ಯಮರೊಂದಿಗೆ ಮಾತನಾಡಿದ ಅವರು, ಸಾಮಾಜಿಕವಾಗಿ ಹಿಂದುಳಿದ ಮತ್ತು ಅಸ್ಪೃಶ್ಯತೆ ಹಾಗೂ ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂಬುದನ್ನು ಸಂವಿಧಾನ ಹೇಳುತ್ತದೆ ಎಂದರು.
ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ:ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಜನರು ಈ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ಗೆ ಅಧಿಕಾರ ನೀಡುವ ಸಂಕಲ್ಪ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ. ಜನರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್ಗಳಿಗೆ ಬೀಗಹಾಕಿ ಕಟ್ಟಿಹಾಕಲು ಬಿಜೆಪಿಯವರು ವಿಫಲ ಯತ್ನ ಮಾಡುತ್ತಿದ್ದಾರೆಂದು ಆರೋಪಿಸಿದರು.
ಚುನಾವಣೆಗೆ ಕಾಂಗ್ರೆಸ್ ರೆಡಿ: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದೆ ಎಂದ ಸಿದ್ದರಾಮಯ್ಯ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಹಿಂದೂ ಪದ ಹೇಳಿಕೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ ಎಂದರು.
ಟಿಪ್ಪು ಜಯಂತಿ ಆಚರಣೆ ತಪ್ಪಲ್ಲ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ತಪ್ಪಲ್ಲ. ಆದರೆ ಸರ್ಕಾರ ಜಯಂತಿಯನ್ನೇ ನಿಷೇಧ ಮಾಡಿದ್ದಾರೆ. ಪಾಲಿಕೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡೋಣ ಎಂದು ತಿಳಿಸಿದರು.
ಇದನ್ನೂ ಓದಿ:ಜಾರಕಿಹೊಳಿ ಹೇಳಿಕೆ ವಿರುದ್ಧ ಕೆರಳಿದ ಕೇಸರಿ ಪಡೆ: 'ಸ್ವಾಭಿಮಾನಿ ಹಿಂದೂ ಅಭಿಯಾನ' ಆರಂಭಿಸಿದ ಸುನಿಲ್ ಕುಮಾರ್