ಹುಬ್ಬಳ್ಳಿ :ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ವೈದ್ಯರ ತಂಡ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದೆ.
ಕೊವಿಡ್-19 ಸೋಂಕಿತರನ್ನು ಗುಣಮುಖರನ್ನಾಗಿ ಮಾಡಲು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪ್ರಯೋಗ ಮಾಡಲಾಗಿತ್ತು. ಆದರೆ, ಹಲವೆಡೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ವಿಫಲವಾದ ನಂತರ ಇದೀಗ ರಾಜ್ಯದಲ್ಲಿ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ಪಾಸ್ಮಾ ಥೆರಪಿ ಚಿಕಿತ್ಸೆ ಯಶ್ವಸಿಯಾಗಿದೆ.
ಹುಬ್ಬಳ್ಳಿಯ ಕೋವಿಡ್-19 ಸೋಂಕಿತ ಪಿ-363ರಿಂದ ಪ್ಲಾಸ್ಮಾ ಪಡೆದು ಮುಂಬೈನಿಂದ ರಾಜ್ಯಕ್ಕೆ ವಾಪಸ್ ಆಗಿದ್ದ ಪಿ-2710 ರೋಗಿಗೆ ಪ್ಲಾಸ್ಮಾ ಥೆರಪಿ ಮಾಡಿ ವೈದ್ಯರ ತಂಡ ಯಶಸ್ಸು ಸಾಧಿಸಿದೆ. ವೈದ್ಯರ ಈ ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಕಿಮ್ಸ್‌ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಐಸಿಎಂಆರ್ ಅನುಮತಿ ನೀಡಿತ್ತು. ರಾಜ್ಯದಲ್ಲಿ ಹುಬ್ಬಳ್ಳಿಯ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಮಾತ್ರ ಅನುಮತಿ ದೊರೆತ ಹಿನ್ನೆಲೆ, ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕಿಮ್ಸ್ ವೈದ್ಯರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಕೋವಿಡ್-19 ಸೋಂಕಿನಿಂದ ಗುಣಮುಖರಾದ ರೋಗಿಗಳು ಬ್ಲಡ್ ನೀಡಲು ಮೊದಲಿಗೆ ಹಿಂದೇಟು ಹಾಕುತ್ತಿದ್ದರು. ಆದರೆ, ಕಿಮ್ಸ್ ಆಡಳಿತ ಮಂಡಳಿ ಗುಣಮುಖರಾದವರನ್ನು ಮನವೊಲಿಸಿ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡಿರುವುದು ವಿಶೇಷ.
ಹಲವಾರು ಸವಾಲುಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ರಾಜ್ಯದಲ್ಲಿಯೇ ಮೊದಲ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಈ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಟಿಸಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅವರು ತಮ್ಮ ಆಸ್ಪತ್ರೆಯ ವೈದ್ಯರ ತಂಡದ ಸಾಧನೆಯನ್ನ ಶ್ಲಾಘಿಸಿದ್ದಾರೆ.