ಹುಬ್ಬಳ್ಳಿ:ರಾಷ್ಟ್ರೀಯ ಯುವಜನೋತ್ಸವ ಪ್ರಪ್ರಥಮ ಬಾರಿಗೆ ಉತ್ತರ ಕರ್ನಾಟಕದ ಭಾಗದಲ್ಲಿ ನಡೆಯುತ್ತಿದ್ದು, ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಕೋರಿದರು. ವಿಮಾನ ನಿಲ್ದಾಣ ಹೊರ ವಲಯದಲ್ಲಿ ಪ್ರಧಾನಿ ಮೋದಿ ಕಾರು ಇಳಿದು ಜನರತ್ತ ಕೈ ಬಿಸಿ ನಡೆಯುತ್ತಾ ಮುಂದೆ ಸಾಗಿದರು
ಹುಬ್ಬಳ್ಳಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಗೆ ಅದ್ಧೂರಿ ಸ್ವಾಗತ ಸ್ವಾಮಿ ವಿವೇಕಾನಂದರ ಜನ್ಮದಿನದ ನಿಮಿತ್ತ ಇಂದಿನಿಂದ ಐದು ದಿನಗಳ ಕಾಲ ನಡೆಯುತ್ತಿರುವ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಧಾನಿ ಮೋದಿ ರೋಡ್ ಶೋ ಮೂಲಕ ತೆರಳುತ್ತಿದ್ದಾರೆ. ಪ್ರಧಾನಿ ಮೋದಿಯನ್ನು ಕಂಡು ಜನರ ಉತ್ಸಾಹ ಇಮ್ಮಡಿಯಾಗಿದೆ. ಇನ್ನು ಮೋದಿ ಅವರು ಸಂಚರಿಸುವ ರಸ್ತೆ ಮಾರ್ಗದಲ್ಲಿ ಸಾರ್ವಜನಿಕ ಸಂಚಾರವನ್ನು ನಿಷೇಧಿಸಲಾಗಿತ್ತು.
ಮೋದಿ ಆಗಮನ ಮುನ್ನ ಸಿಎಂ ಹೇಳಿದ್ದು ಹೀಗೆ: ರಾಷ್ಟ್ರೀಯ ಯುವಜನೋತ್ಸವ ಪ್ರಪ್ರಥಮ ಬಾರಿಗೆ ಉತ್ತರ ಕರ್ನಾಟಕದ ಭಾಗದಲ್ಲಿ ನಡೆಯುತ್ತಿರುವುದು, ನಮ್ಮೆಲ್ಲರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಅದರಲ್ಲಿಯೂ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಈ ಯುವಜನೋತ್ಸವವನ್ನು ಉದ್ಘಾಟಿಸುತ್ತಿರುವುದು ಈ ಭಾಗದ ಜನತೆಯ ಉತ್ಸಾಹವನ್ನು ಹೆಚ್ಚಿಸಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುವ ಯುವಜನೋತ್ಸವ ಹೊಸ ಮೈಲುಗಲ್ಲಿಗೆ ನಾಂದಿಯಾಗುವ ವಿಶ್ವಾಸವಿದೆ ಎಂದು ಏರ್ಪೋರ್ಟ್ನಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್:ಪ್ರಧಾನಿ ಮೋದಿ ಆಗಮನ ಹಿನ್ನೆಲೆವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಮೋದಿ ಆಗಮನಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ನಡೆಸಲಾಗಿತ್ತು. ಪ್ರಧಾನಿ ಮೋದಿ ವಿಮಾನ ನಿಲ್ದಾಣದ ಮೂಲಕ ರೈಲ್ವೆ ಮೈದಾನಕ್ಕೆ ತೆರಳಲಿದ್ದು, ಈ ನಿಟ್ಟಿನಲ್ಲಿ ಶ್ವಾನದಳ, ಸ್ಪೆಷಲ್ ಪೊಲೀಸ್ ಪೋರ್ಸ್ ಮೂಲಕ ಭದ್ರತೆ ಪರಿಶೀಲನೆ ನಡೆಸಲಾಗುತ್ತಿತ್ತು.
ಭದ್ರತೆ ಬಗ್ಗೆ ಅಲೋಕ್ ಕುಮಾರ್ ಪ್ರತಿಕ್ರಿಯೆ: ರೈಲ್ವೆ ಮೈದಾನದ ಮುಖ್ಯ ವೇದಿಕೆಯ ಸುತ್ತಲೂ ಭಾರಿ ಭದ್ರತೆ ಒದಗಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ 2,900 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಗರದಲ್ಲಿ 7 ಎಸ್.ಪಿ ದರ್ಜೆ ಅಧಿಕಾರಿಗಳು, 25 ಡಿ.ಐ.ಎಸ್.ಪಿ ದರ್ಜೆ, 60 ಪಿಐ, 18 ಕೆ.ಎಸ್.ಆರ್.ಪಿ ಗರುಡಾ, ಸಿ.ಆರ್.ಡಿ.ಆರ್ ಸಿಬ್ಬಂದಿ ನಿಯೋಜಿಸಿದ್ದೇವೆ. ಸುಗಮ ಸಂಚಾರಕ್ಕೆ ಬೆಂಗಳೂರಿನ ಟ್ರಾಫಿಕ್ ಸಿಬ್ಬಂದಿಯನ್ನು ಮೀಸಲಿಟ್ಟಿದ್ದು, ಟ್ರಾಫಿಕ್ ನಿಯಂತ್ರಣಕ್ಕಾಗಿ ಪರ್ಯಾಯ ಮಾರ್ಗಕ್ಕೆ ಸೂಚನೆ ನೀಡಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದರು.
ಶುಚಿಗೊಂಡ ನಗರದ ರಸ್ತೆಗಳು: ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದ ಅಂಗವಾಗಿ ಕ್ಲಬ್ ರಸ್ತೆಯ ರೈಲ್ವೆ ಮೈದಾನದವರೆಗಿನ ರಸ್ತೆಯನ್ನು ಶುಚಿಗೊಳಿಸಲಾಗಿದೆ. ಗುಂಡಿಗಳಿಗೆ ಡಾಂಬರು ಹಾಕಿ, ಸಮತಟ್ಟು ಮಾಡಲಾಗಿದೆ. ಗೋಕುಲ ರಸ್ತೆ, ವಾಣಿವಿಲಾಸ ವೃತ್ತ, ಲಕ್ಷ್ಮೀ ವೇ ಬ್ರಿಡ್ಜ್, ದೇಶಪಾಂಡೆ ನಗರ, ಸರ್ವೋದಯ ವೃತ್ತದ ರಸ್ತೆಯ ಇಕ್ಕೆಲಗಳಲ್ಲಿದ್ದ ಧೂಳು ತೆಗೆಯಲಾಗಿದೆ. ರಸ್ತೆ ವಿಭಜಕಗಳಿಗೆ ಸುಣ್ಣಬಣ್ಣ ಬಳಿದು ಅಲಂಕರಿಸಲಾಗಿದೆ. ಪರ್ಯಾಯ ಮಾರ್ಗವಾಗಿ ಗೋಕುಲ ರಸ್ತೆ, ಅಕ್ಷಯ ಪಾರ್ಕ್, ಶಿರೂರು ಪಾರ್ಕ್, ಕಿಮ್ಸ್ ಮುಖ್ಯ ರಸ್ತೆ, ಹೊಸೂರು ವೃತ್ತದ ಮಾರ್ಗಗಳನ್ನು ಪ್ರಧಾನಿ ಸಂಚಾರಕ್ಕೆ ಸಿದ್ಧಗೊಳಿಸಲಾಗಿತ್ತು
ಓದಿ:ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತನೇ ಎಂಬುದನ್ನು ಪರಿಶೀಲಿಸಲು ಸೂಚಿಸಿದ್ದೇನೆ: ಸಿಎಂ ಬೊಮ್ಮಾಯಿ