ಧಾರವಾಡ: ನಾಮಪತ್ರ ಸಲ್ಲಿಕೆ ವೇಳೆ ಸಚಿವರು ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಇಂದು ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ನಾಯಕರಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಕರ್ನಾಟಕ ರಾಷ್ಟ್ರ ಸಮಿತಿ ಪ್ರತಿಭಟನೆ - Graduate field election
ಬಿಜೆಪಿ ನಾಯಕರು ನೀತಿ ಸಂಹಿತಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವಾಗ ಬಿಜೆಪಿ ರಾಜಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಜಗದೀಶ ಶೆಟ್ಟರ್, ಸಿ ಸಿ ಪಾಟೀಲ್, ಶಾಸಕ ಅಮೃತ್ ದೇಸಾಯಿ ಕಾರಿನ ಮೂಲಕ ನೇರವಾಗಿ ಜಿಲ್ಲಾಧಿಕಾರಿ ಕಚೇರಿ ಒಳಗೆ ಪ್ರವೇಶಿಸಿದ್ದರಿಂದ ಗೊಂದಲ ಸೃಷ್ಟಿಯಾಗಿತ್ತು.
ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ಕೆಲಕಾಲ ವಾಗ್ವಾದ ನಡೆಯಿತು. ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಶಿವರಾಜ ಕಾಂಬ್ಳೆ ನಾಮಪತ್ರ ಸಲ್ಲಿಸಲು ಹೊರಟಾಗ ಪೊಲೀಸರು ತಡೆದಿದ್ದಾರೆ ಎನ್ನಲಾಗಿದೆ. ಆ ಸಂದರ್ಭದಲ್ಲಿ ಸಚಿವರ ಕಾರುಗಳು ಒಳ ಹೋದಾಗ ಆರ್.ಕೆ.ಎಸ್. ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಆಡಳಿತ ಪಕ್ಷದವರಿಗೆ ಒಂದು ಕಾನೂನು, ಜನಸಾಮಾನ್ಯರಿಗೆ ಒಂದು ಕಾನೂನಾ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.