ಧಾರವಾಡ:ಬಾಬಾ ರಾಮದೇವ್ ಅವರು ಜಾತಿ ನಿಂದನೆ ಮಾಡಿದ್ದಾರೆ. ಅವರನ್ನು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಬಾಬಾಸಾಹೇಬ್ ಅಂಬೇಡ್ಕರ್ ಲಿಡ್ಕರ್ ಹಿತಾಭಿವೃದ್ಧಿ ಸಂಘದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಬಾಬಾ ರಾಮದೇವ್ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಲಿಡ್ಕರ್ ಹಿತಾಭಿವೃದ್ಧಿ ಸಂಘದ ಕಾರ್ಯಕರ್ತರು ಬಾಬಾ ರಾಮದೇವ್ ಅವರ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕೆಲ ದಿನಗಳ ಹಿಂದೆ ಮಾಧ್ಯಮದಲ್ಲಿ ಯೋಗ ಗುರು ಬಾಬಾ ರಾಮದೇವ್ ಅವರು ಡಾ. ಬಾಬಾಸಾಹೇಬ್ ಕೇ ಚೇಲೆ ಆತಂಕವಾದಿ ಹೈ ಎಂದು ಟೀಕೆ ಮಾಡಿ ಕಾನೂನು ಬಾಹಿರವಾಗಿ ಮಾತನಾಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಕ್ಕೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದರು.
ಕೆಸಿಎಸ್ಆರ್ ಅಧಿನಿಯಮ 1958ರ ಅನ್ವಯ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಸೂಕ್ತ ಕ್ರಮ ಕೈಗೊಂಡು ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.