ಹುಬ್ಬಳ್ಳಿ :ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಜ.12 ರಂದು ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಾಗಿದೆ. ಇದು ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ. ಹೀಗಾಗಿ ಕಾಂಗ್ರೆಸ್ ಇದನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹೇಳಿದರು.
ಜನವರಿ 12ಕ್ಕೆ ಹುಬ್ಬಳ್ಳಿಗೆ ಪ್ರಧಾನಿ ಮೋದಿ : ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಇಂದು ಇಲ್ಲಿನ ರೈಲ್ವೆ ಮೈದಾನದಲ್ಲಿ ಬಿರುಸಿನ ಸಿದ್ಧತೆ ನಡೆಯುತ್ತಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಸುಮಾರು 25-30 ಸಾವಿರ ಯುವಕರು ಭಾಗಿಯಾಗಲಿದ್ದಾರೆ. ಅಲ್ಲದೆ ದೇಶದ ವಿವಿಧ ರಾಜ್ಯಗಳಿಂದ 8 ಸಾವಿರ ಯುವಕರು ಆಗಮಿಸಲಿದ್ದಾರೆ. ಅವರಿಗೆ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಹುಬ್ಬಳ್ಳಿಯಲ್ಲಿ 2018ರ ನಂತರ ನಡೆಯುತ್ತಿರುವ ನರೇಂದ್ರ ಮೋದಿಯವರ ಬೃಹತ್ ಕಾರ್ಯಕ್ರಮ ಇದಾಗಿದೆ ಎಂದರು.
ರಾಷ್ಟ್ರೀಯ ಯುವಜನೋತ್ಸವ ಸರ್ಕಾರಿ ಕಾರ್ಯಕ್ರಮ : ಇನ್ನು, ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದೆ. ರಾಜ್ಯ ಸರ್ಕಾರದ ಸಹಕಾರದೊಂದಿಗೆ ನಡೆಯುತ್ತಿದೆ. ಈಗಾಗಲೇ ಕಾರ್ಯಕ್ರಮದ ಸಿದ್ಧತೆ ಭರದಿಂದ ಸಾಗಿದ್ದು, ಜಿಲ್ಲಾಡಳಿತ ಉತ್ತಮ ಕಾರ್ಯ ನಿರ್ವಹಿಸುತ್ತಿದೆ ಎಂದು ಶೆಟ್ಟರ್ ಹೇಳಿದರು.
ಕಾಂಗ್ರೆಸ್ ಗೋ ಬ್ಯಾಕ್ ಅಭಿಯಾನಕ್ಕೆ ಅರ್ಥವಿಲ್ಲ: ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿ-ಧಾರವಾಡಕ್ಕೆ ಬರುತ್ತಿರುವ ಹಿನ್ನೆಲೆ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಗೋ-ಬ್ಯಾಕ್ ಮೋದಿ ಅಭಿಯಾನ ಆರಂಭಿಸಿದೆ. ಇದಕ್ಕೆ ಯಾವುದೇ ಅರ್ಥವಿಲ್ಲ. ಮುಂದಿನ 2-3 ತಿಂಗಳಲ್ಲಿ ಚುನಾವಣೆ ಬರುವ ಹಿನ್ನೆಲೆಯಲ್ಲಿ ಅವರಿಗೆ ಮಾಡಲು ಏನೂ ಕೆಲಸವಿಲ್ಲದೇ ಈ ರೀತಿಯಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಜಗದೀಶ್ ಶೆಟ್ಟರ್ ಕಿಡಿಕಾರಿದರು.