ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಬಿ. ಸಿ. ಸತೀಶ್ ಅವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಂವಾದ ನಡೆಸಿ ಪ್ರಗತಿ ಪರಿಶೀಲನೆ ಮಾಡಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಧಾರವಾಡ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಕರ್ತವ್ಯದಲ್ಲಿರುವುದರಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ. ಸಿ. ಸತೀಶ್ ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಕುರಿತು ಸಿಎಂಗೆ ವಿವರಿಸಿದರು.
ಧಾರವಾಡ ಜಿಲ್ಲೆಯಲ್ಲಿ ಮಾಸ್ಕ್ ಅಭಿಯಾನ, ಸ್ವ್ಯಾಬ್ ಸಂಗ್ರಹ ಹಾಗೂ ಸೋಂಕಿತರ ಚಿಕಿತ್ಸೆ ಕುರಿತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳ ತಂಡಗಳನ್ನು ರಚಿಸಿ ಪ್ರಮುಖ ಜನಸಂದಣಿ ಇರುವ ಪ್ರದೇಶಗಳಲ್ಲಿ ತಪಾಸಣೆ ಮಾಡಿ ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದವರಿಂದ ದಂಡ ಸಂಗ್ರಹದೊಂದಿಗೆ ಸ್ವ್ಯಾಬ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಮಾಸ್ಕ್ ಧರಿಸದವರಿಗೆ ದಂಡಕ್ಕಿಂತ ಹೆಚ್ಚಾಗಿ ಜಾಗೃತಿ ಮೂಡಿಸುವ ಮತ್ತು ಅವರನ್ನು ತಪಾಸಣೆಗೆ ಒಳಪಡಿಸುವ ಕ್ರಮಕ್ಕೆ ಒತ್ತು ನೀಡಲಾಗುತ್ತಿದೆ ಎಂದು ವಿವರಿಸಿದರು.
ಸಂವಾದದಲ್ಲಿ ಮುಖ್ಯಮಂತ್ರಿಗಳೊಂದಿಗೆ ಕಂದಾಯ ಸಚಿವ ಆರ್. ಅಶೋಕ್, ವೈದ್ಯಕೀಯ ಸಚಿವ ಡಾ. ಸುಧಾಕರ್, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಆಯುಕ್ತ ಪಂಕಜ್‍ಕುಮಾರ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.