ಹಾಸನ:ಮುಂಬೈನಿಂದ ಜಿಲ್ಲೆಗೆ ಮರಳಿದ್ದ ಸೋಂಕು ಪೀಡಿತರ ಪೈಕಿ ಇಂದು 29 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹಾಸನ ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆದವರು ಮುಂಬೈ, ಗುಜರಾತ್ ಹಾಗೂ ತಮಿಳುನಾಡಿನಿಂದ ಬಂದಿದ್ದ 140 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ಇವರನೆಲ್ಲಾ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇವರಲ್ಲಿ ಮೊದಲಿಗೆ ದಾಖಲಾಗಿದ್ದ 29 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ವೈದ್ಯಕೀಯ ಸಿಬ್ಬಂದಿ ಗುಣಮುಖ ಆದವರನ್ನು ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು.
ಈ ವೇಳೆ ಮಾತನಾಡಿದ ಶಾಸಕ ಸಿ.ಎನ್. ಬಾಲಕೃಷ್ಣ, ಕೊರೊನಾ ಹೆಚ್ಚುತ್ತಿರುವ ಬೆನ್ನಲ್ಲೇ ಆಸ್ಪತ್ರೆಯಿಂದ 29 ಮಂದಿ ಗುಣಮುಖರಾಗಿ ಬಿಡುಗಡೆ ಆಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಇಂದು ಆಸ್ಪತ್ರೆಯಿಂದ ಬಿಡುಗಡೆಯಾದ ಎಲ್ಲರೂ ಮುಂಬೈನಿಂದ ಬಂದವರಾಗಿದ್ದು, ಇದರಲ್ಲಿ 23 ಮಂದಿ ಚನ್ನರಾಯಪಟ್ಟಣ ತಾಲೂಕಿಗೆ ಸೇರಿದ್ದು, ಉಳಿದವರು ಹೊಳೆನರಸೀಪುರ ತಾಲೂಕಿನವರಾಗಿದ್ದಾರೆ ಎಂದು ತಿಳಿಸಿದರು.
ಪಾಸಿಟಿವ್ ಬಂದಿರುವ 111 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸಿ ಗುಣಮುಖ ಆದರೆ 2-3 ದಿನದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಜೂನ್ ಮೊದಲ ವಾರದೊಳಗೆ ಕೊರೊನಾ ಪೀಡಿತರು ವೈರಸ್ ಮುಕ್ತವಾಗಿ ಹೊರಬರುವುದರಲ್ಲಿ ಸಂಶಯವಿಲ್ಲ ಎಂದರು.
ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ ಪರಮೇಶ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಅಪರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಹಿಮ್ಸ್ ಅಸ್ಪತ್ರೆ ನಿರ್ದೇಶಕ ಡಾ. ರವಿ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಹಾಜರಿದ್ದರು.