ಹಾಸನ: ತಮ್ಮ ಪ್ರಾಣವನ್ನು ಲೆಕ್ಕಿಸದೆ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಪಕ್ಷದಿಂದ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಆಶಾ ಕಾರ್ಯಕರ್ತೆಯರು ಲಾಕ್ ಡೌನ್ ಜಾರಿಗೆ ಬಂದ ಪರಿಣಾಮದಿಂದಾಗಿ ಹೆಚ್ಚಿನ ಜವಬ್ಧಾರಿ ಹೊತ್ತು ಪ್ರತಿ ಮನೆಗೆ ತೆರಳಿ ಕೊರೊನಾ ಪೀಡಿತರನ್ನು ಗುರುತಿಸಿ, ಅವರ ಆರೋಗ್ಯ ತಪಾಸಣೆಗಾಗಿ ಸರಕಾರಕ್ಕೆ ನೆರವಾಗಿದ್ದಾರೆ. ಮತ್ತೊಬ್ಬರ ಬಗ್ಗೆ ಸುರಕ್ಷತೆ ಮಾಡುವವರಿಗೆ ಯಾವ ಸುರಕ್ಷಿತವಾದ ಅನುಕೂಲಗಳಿಲ್ಲ. ಸರಕಾರದಿಂದ ಕೇವಲ ಆರು ಸಾವಿರ ರೂ.ಗಳ ಗೌರವಧನ ನೀಡಲಾಗುತ್ತಿದೆ. ಅವರ ಕುಟುಂಬ ನಿರ್ವಹಣೆ ಕಷ್ಟವಾಗಿದ್ದು, ಆಶಾ ಕಾರ್ಯಕರ್ತೆಯರ ಸೇವೆ ಮತ್ತು ಅವರು ಸ್ವೀಕರಿಸಿದ ಸವಾಲನ್ನು ನಾವು ಗೌರವಿಸಬೇಕು ಎಂದು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಹೇಳಿದರು.
ಮಹಿಳಾ ಕಾಂಗ್ರೆಸ್ ಪಕ್ಷದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ನಮ್ಮ ಆರೋಗ್ಯದ ರಕ್ಷಣೆ ಮಾಡುವ ಅವರಿಗೆ ಆರೋಗ್ಯ ವಿಮೆ ಕಲ್ಪಿಸುವ ಅಗತ್ಯವಿದೆ. ವಿವಿಧ ಇಲಾಖೆಗಳ ಮಹಿಳಾ ಸಿಬ್ಬಂದಿ, ಮಹಿಳಾ ಆಶಾ ಕಾರ್ಯಕರ್ತೆಯರು ಮತ್ತು ಮಹಿಳಾ ಪೌರಕಾರ್ಮಿಕರು ಕೊರೊನಾ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸುವ ಅವರ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಇತ್ತೀಚಿಗೆ ಆಶಾ ಕಾರ್ಯಕರ್ತೆಯರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದು, ಇಬ್ಬರೂ ನಾಯಕರು ಅವರಿಗೆ ಬೆಂಬಲ ಸೂಚಿಸಿದ್ದಾರೆ. ಈಗ ಸರಕಾರದ ಮುಂದೆ ಬೇಡಿಕೆಗಳನ್ನು ಇಡಲಾಗಿದ್ದು, ಸರಕಾರ ಈಗಲಾದರೂ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಜನರಿಗೆ ತಿಳಿಸುವ ಕಾರ್ಯ ಮಾಡಲಾಗುವುದು ಎಂದು ಅವರು ಹೇಳಿದರು.