ಸಕಲೇಶಪುರ/ಹಾಸನ: ರಾಜ್ಯದ ಉಪಚುನಾವಣೆಗಳಲ್ಲಿ ಬಿಜೆಪಿ ಹೆಚ್ಚಿನ ಬಹುಮತ ಪಡೆಯಲಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಸಚಿವ ಕೆ.ಗೋಪಾಲಯ್ಯ ಪ್ರತಿಕ್ರಿಯೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದ್ದ ಕಾಫಿ ಬೆಳೆಗಾರರ ಸಮಾವೇಶದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಬಾರಿಯ ಉಪಚುನಾವಣೆಯಲ್ಲಿ ಮತ್ತು ಒಂದು ಲೋಕಸಭಾ ಕ್ಷೇತ್ರ ಸೇರಿದಂತೆ ಮೂರರಲ್ಲಿ ಬಿಜೆಪಿ ಬಹುಮತದೊಂದಿಗೆ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಸಕಲೇಶಪುರ ಭಾಗದಲ್ಲಿ ಕಾಡಾನೆ ಸಮಸ್ಯೆ ಹೆಚ್ಚಾಗುತ್ತಿದೆ. ಇಂದು ಕೂಡ ಆನೆಯೊಂದು ಕಾರಿನ ಮೇಲೆ ದಾಳಿ ನಡೆಸಲು ಮುಂದಾಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಕೂಡಲೇ ಒಂಟಿ ಸಲಗವನ್ನು ಕಾಡಿಗೆ ಓಡಿಸುವ ಕಾರ್ಯ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಕಾಫಿ ಬೆಳೆಗಾರರ ಸಂಘದ ಸಮಸ್ಯೆಗಳನ್ನು ಸಾಧ್ಯವಾದಷ್ಟು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಕಾಡಾನೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಪಂಚರಾಜ್ಯ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಮುಗಿದ ಬಳಿಕ ಕಾಡಾನೆ ಸಮಸ್ಯೆ ಎದುರಿಸುತ್ತಿರುವ ಹಾಸನ, ಕೊಡಗು, ಕಾರವಾರ, ಶಿವಮೊಗ್ಗ ಭಾಗದಲ್ಲಿನ ಶಾಸಕರುಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ಸಮಸ್ಯೆ ಬಗ್ಗೆ ಚರ್ಚೆ ಮಾಡುವುದು ಸೇರಿದಂತೆ ರೈತರಿಗೆ ಬೇಕಾಗುವಂತಹ ಗೊಬ್ಬರದ ಬಗ್ಗೆ ಕೂಡ ಕೇಂದ್ರ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಜೊತೆಯು ಕೂಡ ಮಾತುಕತೆ ನಡೆಸುತ್ತೇವೆ. ಬಳಿಕ ಕೇಂದ್ರ ಪರಿಸರ ಸಚಿವ ಹಾಗೂ ಅರವಿಂದ ಲಿಂಬಾವಳಿ ಜತೆ ಮಲೆನಾಡು ಭಾಗದಲ್ಲಿ ಪ್ರಾಣಿಗಳ ನಡುವಿನ ಸಂಘರ್ಷಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.