ಹಾಸನ:ಹರಿಯಾಣದಲ್ಲಿ ರೈತರ ಮೇಲೆ ನಡೆದ ಲಾಠಿ ಚಾರ್ಜ್ ಹಾಗೂ ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ಕಾನೂನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಇತರೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ಸಂದರ್ಭದಲ್ಲಿ ನಗರದ ಮುಖ್ಯ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಅಖಿಲ ಭಾರತ ಮುಷ್ಕರದ ಭಾಗವಾಗಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾ ಮುಖ್ಯ ಅಂಚೆ ಕಚೇರಿವರೆಗೆ ಮೆರವಣಿಗೆ ನಡೆಯಿತು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಚೆ ಕಚೇರಿ ಒಳಗೆ ಬಿಡದ ಕಾರಣ ಪ್ರತಿಭಟನಾಕಾರರು ರಸ್ತೆ ಮಧ್ಯೆ ಕುಳಿತು ವಾಹನ ಓಡಾಟಕ್ಕೆ ಅಡಚಣೆ ಉಂಟುಮಾಡಿದರು. ವಿಷಯ ಮನಗಂಡ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾನಿರತರನ್ನು ಬಂಧಿಸಿ ಜಿಲ್ಲಾ ಸಶಸ್ತ್ರ ಮೀಸಲು ಮೈದಾನಕ್ಕೆ ಕರೆದೊಯ್ದರು.