ಸಕಲೇಶಪುರ :ರಾಜ್ಯ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ತಾಲೂಕಿನ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನೂತನ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಗರದ ಹಳೆ ಬಸ್ ನಿಲ್ದಾಣದಿಂದ ಎಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ ತಾಲೂಕು ಪಂಚಾಯತ್ ಸದಸ್ಯ ಯಡೇಹಳ್ಳಿ ಆರ್.ಮಂಜುನಾಥ್, ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಒಂದು ಕರಾಳ ಶಾಸನವಾಗಲಿದೆ. ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದರು.
ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುತ್ತಿರುವುದು ಆತಂಕಕಾರಿ ಬೆಳವಣಿಗೆ. ಸಣ್ಣ ರೈತರಿಂದ ಕೃಷಿ ಭೂಮಿ ಕಿತ್ತುಕೊಳ್ಳುವ ಸಂಚು ಮಾಡಿದೆ. ಅವರನ್ನು ಆರ್ಥಿಕ ಸಂಕಷ್ಟಕ್ಕೆ ದೂಡುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭೂ ಸುಧಾರಣಾ ಕಾಯ್ದೆ ವಾಪಸ್ ಪಡೆಯದಿದ್ರೆ ಮುಂದಿನ ದಿನಗಳಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಗ್ರ ಹೋರಾಟ ನೆಡಸಲಾಗುವುದು ಎಂದರು.
ಅಕ್ಕಪಕ್ಕದ ದೇಶಗಳ ಗಡಿ ಭಾಗದಲ್ಲಿ ತಂಟೆ ತಕರಾರು ಬಂದಾಗ ದೇಶಭಕ್ತಿ ಹೆಸರಿನಲ್ಲಿ ಹಿಂದುತ್ವದ ಅಜೆಂಡಾವನ್ನು ಮುಂದಿಡುತ್ತಾ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಬಡವರಿಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ಆರೋಪಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್ ಬಿ ಬಾಸ್ಕರ್ ಮಾತನಾಡಿ, ಗಡಿ ಕಾಯುವ ಯೋಧರ ಸುರಕ್ಷತೆಯ ವಿಚಾರದಲ್ಲಿ ಕೇಂದ್ರ ಬಿಜೆಪಿ ಸರ್ಕಾರದ ಹಲವು ಲೋಪಗಳಿವೆ.
ಚೀನಾದ ಸೈನಿಕರ ಜೊತೆ ಮುಖಾಮುಖಿಯಲ್ಲಿ ತೊಡಗಿದ್ದ ಯೋಧರಿಗೆ ಸರಿಯಾದ ಶಸ್ತ್ರಾಸ್ತ್ರಗಳನ್ನು ನೀಡದೆ ಯೋಧರ ಮರಣಕ್ಕೆ ನೇರ ಹೊಣೆಯಾಗಿದೆ ಎಂದು ದೂರಿದರು. ಇನ್ನು ಪ್ರತಿಭಟನೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮ ದಿನದ ಪ್ರಯುಕ್ತ ಕಾಫರ್ಡ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಹಣ್ಣು ವಿತರಿಸಿದರು.