ಹಾಸನ:ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಸೋಂಕಿತರ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಲು ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಸೋಂಕು ದೃಢಪಟ್ಟ ವ್ಯಕ್ತಿಯ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಸಂಪರ್ಕಿತರನ್ನು ಪಟ್ಟಿ ಮಾಡಿ ತಪಾಸಣೆಗೆ ಒಳಪಡಿಸಬೇಕು ಎಂದು ಸೂಚಿಸಿದರು.
ಪ್ರಥಮ ಸಂಪರ್ಕಿತರಿಗಿಂತ ದ್ವಿತೀಯ ಸಂಪರ್ಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕನಿಷ್ಠ ಸೋಂಕಿತರಿಗೆ 6 ಪ್ರಥಮ ಹಾಗೂ 6 ದ್ವಿತೀಯ ಸಂಪರ್ಕಿತರು ಕಂಡುಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳು ತಾಲೂಕು ಆಡಳಿತದ ಸಹಕಾರದೊಂದಿಗೆ ಹೆಚ್ಚು ಹೆಚ್ಚು ಸಂಪರ್ಕಿತರ ಪತ್ತೆ ಮಾಡಬೇಕು ಎಂದು ಹೇಳಿದರು.
ಅಧಿಕಾರಿಗಳು ಕೇವಲ ಗುರಿಯನ್ನು ಸಂಪೂರ್ಣಗೊಳಿಸುವ ಸಲುವಾಗಿ ಮಾತ್ರ ಕಾರ್ಯ ನಿರ್ವಹಿಸದೆ, ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಸಂಪೂರ್ಣ ಪ್ರಯತ್ನ ಮಾಡಬೇಕು. ಸಂಪರ್ಕಿತರನ್ನು ಪತ್ತೆ ಹಚ್ಚಲು ಹೆಚ್ಚು ಸಿಬ್ಬಂದಿಯನ್ನು ಬಳಸಿಕೊಂಡು ಕಂಟೈನ್‍ಮೆಂಟ್ ವಲಯಗಳಲ್ಲಿ ಶೀತ, ಜ್ವರ ಹಾಗೂ ಉಸಿರಾಟದ ತೊಂದರೆಗಳಂತಹ ರೋಗ ಲಕ್ಷಣಗಳು ಇರುವವರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆಗಳ ಕೊರತೆ ಉಂಟಾಗುವ ಸಾಧ್ಯತೆ ಇದ್ದು, ಡೆಡಿಕೇಟೆಡ್ ಕೋವಿಡ್ ಆರೋಗ್ಯ ಕೇಂದ್ರಗಳಲ್ಲಿಯೇ ಸೋಂಕಿತರ ತಪಾಸಣೆ ಮಾಡುವ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲಾ ತಾಲೂಕುಗಳಿಗೆ ಅತ್ಯಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಖರೀದಿಸಿ ಎಂದು ತಿಳಿಸಿದರು.