ಹಾಸನ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಆರ್ಟಿಪಿಸಿಆರ್ ಮತ್ತು ರ್ಯಾಟ್ ಪರೀಕ್ಷೆಗಳಿಗೆ ಜಿಲ್ಲಾಡಳಿತ ನೀಡಿರುವ ನಿರ್ದಿಷ್ಟ ಗುರಿ ತಲುಪಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಎಲ್ಲಾ ತಾಲೂಕುಗಳ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್ ತಡೆಗಟ್ಟುವ ಕುರಿತು ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿ ದಿನ 3,300 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲು ಗುರಿ ನೀಡಿದ್ದು, ಎಲ್ಲಾ ಅಧಿಕಾರಿಗಳು ಅದಕ್ಕೆ ಬೇಕಾದ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ತಿಳಿಸಿದರು.
ವೈದ್ಯಾಧಿಕಾರಿಗಳು ಕೋವಿಡ್ ಪರೀಕ್ಷೆ ಮಾಡಲು ಹೋದಾಗ ಸಾರ್ವಜನಿಕರು ಪೂರ್ಣ ರೀತಿಯಲ್ಲಿ ಸಹಕರಿಸುತ್ತಿಲ್ಲ, ಜನರು ಗಲಾಟೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿದ್ದು, ಈ ಹಿನ್ನಲೆಯಲ್ಲಿ ಯುದ್ದೋಪಾದಿಯಲ್ಲಿ ಯೋಜನೆ ಮಾಡಿಕೊಂಡು ಜನಗೆ ಅರಿವು ಮೂಡಿಸಿ ನಂತರ ಪರೀಕ್ಷೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಪ್ರಾಥಮಿಕ ಸಂಪರ್ಕಿತರು, ರೋಗ ಲಕ್ಷಣಗಳಿರುವವರನ್ನು ಪತ್ತೆಮಾಡಿ ಪರೀಕ್ಷೆಗೆ ಒಳಪಡಿಸಲು ಆರೋಗ್ಯಾಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ನಿರ್ದಿಷ್ಟ ಗುರಿ ನೀಡುವಂತೆ ತಾಲೂಕು ವೈದ್ಯಾಧಿಕಾರಿಗಳಿಗೆ ನಿರ್ದೇಶಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರುಗಳೊಂದಿಗೆ ಸಭೆ ನಡೆಸಿ ಪರೀಕ್ಷೆಯಲ್ಲಿ ನಿರ್ದಿಷ್ಟ ಗುರಿ ತಲುಪಲು ಕಟ್ಟುನಿಟ್ಟಿನ ಕ್ರಮವಹಿಸಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಲ್ಯಾಬ್‍ಗಳ ಮೂಲಕ ಪರೀಕ್ಷೆ ನಡೆಸುವಂತೆ ವೈದ್ಯಾಧಿಕಾರಿಗಳಿಗೆ ತಿಳಿಸಿದರು. ಹಾಸನ ನಗರದ ನಂತರ ಕೋವಿಡ್ ಸೋಂಕಿತರಲ್ಲಿ ಮುಂಚೂಣಿಯಲ್ಲಿರುವ ತಾಲೂಕು ಅರಸೀಕೆರೆ. ಹಾಗಾಗಿ ಸಮುದಾಯ ಆರೋಗ್ಯ ಕೇಂದ್ರಗಳ ಸುತ್ತಮುತ್ತಲ ಪ್ರದೇಶಗಳಿಗೆ ಆಶಾ ಕಾರ್ಯಕರ್ತೆಯರ ಮೂಲಕ ಅಥವಾ ಗ್ರಾಮ ಪಂಚಾಯಿತಿ ಮೂಲಕ ಸ್ಥಳೀಯವಾಗಿ, ಸೂಕ್ತವಾಗಿ ಮತ್ತು ತ್ಯಾಜ್ಯ ವಿಲೇವಾರಿ ಮಾಡುವ ವಾಹನಗಳ ಮೂಲಕ ಕೋವಿಡ್ ಪರೀಕ್ಷೆಗೆ ಕುರಿತಂತೆ ಪ್ರಚಾರ ಮಾಡಿಸಿ ಪರೀಕ್ಷೆಯಲ್ಲಿ ಗುರಿ ಸಾಧಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ವೈದ್ಯಾಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ನರೇಗಾ ಯೋಜನೆಗಳ ಪ್ರಚಾರದ ಜೊತೆಗೆ ಕೋವಿಡ್ ಸೋಂಕು ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವ್ಯಾಪಕವಾಗಿ ಪ್ರಚಾರ ಮಾಡಿ ಅರಿವು ಮೂಡಿಸುವಂತೆ ತಿಳಿಸಿದರು.
ಹೋಂ ಐಸೋಲೇಷನ್ ಹಾಗೂ ಹೋಂ ಕ್ವಾರಂಟೈನ್ನಲ್ಲಿರುವವರು ಅನವಶ್ಯಕವಾಗಿ ಓಡಾಡದಂತೆ ಪ್ರತಿ ದಿನ ಮನೆಗಳಿಗೆ ಭೇಟಿ ನೀಡಿ ಫೋಟೋ ತೆಗೆದು ಅಪ್ಲೋಡ್ ಮಾಡುವಂತೆ ಹಾಗೂ ಶೇ.100 ರಷ್ಟು ಹೋಂ ಐಸೋಲೇಷನ್ನಲ್ಲಿರುವವರ ಕುರಿತು ನಿಗಾವಹಿಸುವಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರುಗಳಿಗೆ ಮತ್ತು ಈ.ಓ ಗಳಿಗೆ ನಿರ್ದೇಶಿಸಿದರು. ನಗರ ಪ್ರದೇಶ, ಪಟ್ಟಣ ಪಂಚಾಯಿತಿ ವ್ಯಾಪ್ತಿ, ಹೋಬಳಿ ಮಟ್ಟ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸದೆ ಸರ್ಕಾರದ ನಿಯಮ ಉಲ್ಲಂಘಿಸಿದವರ ವಿರುದ್ಧ ಹಾಗೂ ನಿರ್ಲಕ್ಷ್ಯದಿಂದ ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಿಗೆ ಸೇರುವವರ ವಿರುದ್ಧ ಹೆಚ್ಚಿನ ದಂಡ ವಿಧಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರ್ಯಾಟ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ವ್ಯಕ್ತಿಗಳಿಗೆ ರೋಗಲಕ್ಷಣಗಳಿರುವುದು ಕಂಡು ಬಂದಲ್ಲಿ ಅಂತಹವರನ್ನು ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗೆ ಒಳಪಡಿಸುವಂತೆ ಹಾಗೂ ಪ್ರತಿ ದಿನ ಅಂಕಿ ಅಂಶಗಳ ವರದಿ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಗೆ ನೀಡಿರುವ ನಿರ್ದಿಷ್ಟ ಗುರಿ ಸಾಧನೆಗಾಗಿ ಮತ್ತು ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಹೆಚ್ಚು ಜನಸಂದಣಿ ಇರುವ ತಾಲೂಕು ಕಚೇರಿಗಳು, ಸಬ್ ರಿಜಿಸ್ಟರ್ ಕಚೇರಿ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿನ ಜನರನ್ನು ಪರೀಕ್ಷೆಗೆ ಒಳಪಡಿಸುವಂತೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶಿಸಿದರು.