ಹಾಸನ: ಆರೋಗ್ಯ, ವೈದ್ಯಕೀಯ ಮತ್ತುಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಜತೆಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರ 14 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಐದು ದಿನಗಳಿಂದ ಮುಷ್ಕರ ನಡೆಸಲಾಗುತ್ತಿದೆ. ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಹಾಗೂ ಶಿಕ್ಷಣ ಇಲಾಖೆಯಲ್ಲಿರೋ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ರಾಥೋಡ್ ಎಚ್ಚರಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಇತರೆ ಮ್ಯಾನೇಜ್ಮೆಂಟ್ ಹಾಗೂ ಕಚೇರಿ ಸಿಬ್ಬಂದಿ ಹಲವು ವರ್ಷಗಳಿಂದ ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿ ಶಾಂತಿಯುತ ಮುಷ್ಕರ ನಡೆಸಲಾಗುತ್ತಿದೆ. ಆದರೆ, ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದೆ ಸುಮಾರು 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮ್ಮನ್ನು ಕೆಲಸದಿಂದ ತೆಗೆಸುವಂತೆ ಅಧಿಕಾರಿಗಳಿಂದ ನೋಟಿಸ್ ಜಾರಿ ಮಾಡಿಸಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
2005ರ ಆರಂಭದಿಂದಲೂ ಜಿಲ್ಲೆಯಲ್ಲಿ 1,500 ಜನ ₹10,500 ಸಾವಿರ ಸಂಬಳ ಪಡೆಯುತ್ತಿದ್ದೇವೆ. ನಮಗೆ ಯಾವುದೇ ಭದ್ರತೆ ಇಲ್ಲ, ಭೋನಸ್ ಇಲ್ಲ, ಕಾನೂನು ಪ್ರಕಾರ ಸಮಾನ ಕೂಲಿಗೆ ಸಮಾನ ವೇತನ ಇಲ್ಲ. ನಾಲ್ಕೈದು ವರ್ಷದಿಂದ ಹೋರಾಟ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಅನೇಕ ಬಾರಿ ಒತ್ತಡ ತರಲಾಗಿದೆ. ಬಾಂಡ್ ಬರೆದುಕೊಟ್ಟು ಜೀತದಾಳುಗಳ ರೀತಿ ನಾವು ಕೆಲಸ ಮಾಡುತ್ತಿದ್ದೇವೆ. ಬೇಡಿಕೆ ಈಡೇರಿಕೆಗೆ ಸರ್ಕಾರ ನೀಡಿದ್ದ ಮೂರು ತಿಂಗಳ ಗಡುವು ಮುಗಿದಿದೆ ಎಂದರು.