ಹಾಸನ:ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪಾಸಿಟಿವ್ ಪ್ರಕರಣಗಳನ್ನು ತಡೆಗಟ್ಟಲು ಅಧಿಕಾರಿಗಳು ಇನ್ನಷ್ಟು ಶ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಹೊರ ರಾಜ್ಯಗಳಿಂದ ಬರುತ್ತಿರುವವರನ್ನು ತಪಾಸಣೆಗೆ ಒಳಪಡಿಸಿ, ಅವರನ್ನು ಹದಿನಾಲ್ಕು ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿ ಇಡಬೇಕು ಎಂದು ಸೂಚನೆ ನೀಡಿದರು.
ಹೊರ ರಾಜ್ಯಗಳಿಂದ ಬರುತ್ತಿರುವವರನ್ನು ನೇರವಾಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸುತ್ತಿರುವುದರಿಂದ ನಾಗರಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ಅಪಾಯಕಾರಿ ಎನ್ನುವಷ್ಟರ ಮಟ್ಟಿಗೆ ಸೋಂಕಿತರಲ್ಲಿ ರೋಗದ ಲಕ್ಷಣಗಳು ಪತ್ತೆಯಾಗಿಲ್ಲ. ಹಾಗಾಗಿ ಆತಂಕಕ್ಕೆ ಒಳಗಾಗದೆ ಜಿಲ್ಲೆಯ ಅಭಿವೃದ್ಧಿಯತ್ತ ಗಮನ ಹರಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಬಳಿಕ ಮಾತನಾಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಸತೀಶ್, ಕಳೆದ ನಾಲ್ಕು ದಿನಗಳಿಂದ ಮಹಾರಾಷ್ಟ್ರದಿಂದ ಬಂದ 16 ಮಂದಿಯಲ್ಲಿ ಕೊರೊನಾ ಪತ್ತೆಯಾಗಿತ್ತು. ಅವರ ಬಗ್ಗೆ ಪ್ರತಿನಿತ್ಯ ನಿಗಾ ವಹಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 4521 ಮಂದಿಯ ಪರೀಕ್ಷೆ ಮಾಡಲಾಗಿದೆ. 542 ಜನರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದು, 87 ಮಂದಿಯನ್ನು 14ರಿಂದ 28 ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿಡಲಾಗಿದೆ. 663 ಜನರನ್ನು ಜಿಲ್ಲಾ ಕೊವಿಡ್-19 ಕೇಂದ್ರದಲ್ಲಿ ಇರಿಸಲಾಗಿದೆ. 164 ಮಂದಿಯನ್ನು ಆಸ್ಪತ್ರೆಯ ಐಸೋಲೇಷನ್ನಲ್ಲಿ ಇಡಲಾಗಿದೆ. ಪರೀಕ್ಷೆ ಪೂರ್ಣಗೊಳಿಸಿದ 1176 ಮಂದಿಯನ್ನ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.