ಹಾಸನ:ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬ ಹಾಗೂ ಜೆಡಿಎಸ್ ಶಾಸಕರ ಅನುದಾನವನ್ನು ಹಿಂಪಡೆದಿರುವ ಬಿಜೆಪಿ ಸರ್ಕಾರ ಕ್ರಮವನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟಿಸಿದ್ರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್.ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿ ವಾಹನ ಸಂಚಾರಕ್ಕೆ ಅಡಚಣೆಯನ್ನುಂಟು ಮಾಡಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮುಂದುವರಿಸಿ ಡಿಸಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನಡೆಸಿದ ಜೆಡಿಎಸ್ ಪ್ರಕೃತಿ ವಿಕೋಪದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದಲ್ಲಿ ಪ್ರಾಣ ಹಾನಿ, ಬೆಳೆ ಹಾಗೂ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ. ಜೊತೆಗೆ ಲಕ್ಷಾಂತರ ಜನ ಬೀದಿ ಪಾಲಾಗಿದ್ದಾರೆ. ಆದರೆ, ಇದುವರೆಗೂ ನೆರೆ ಸಂತ್ರಸ್ತರಿಗೆ ಪರಿಹಾರ ಕ್ರಮಗಳನ್ನು ಕೈಗೊಂಡಿಲ್ಲ. ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಶಾಲಾ ಕಟ್ಟಡಗಳು ಬೀಳುವ ಹಂತದಲ್ಲಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ಕಟ್ಟಗಳು ಬಿದ್ದು ಮಕ್ಕಳಿಗೆ ತೊಂದರೇ ಉಂಟಾದರೇ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈತ್ರಿ ಸರ್ಕಾರದಲ್ಲಿ ಜಿಲ್ಲೆಗೆ ನೀಡಿದ ಅನುದಾನವನ್ನು ಬಿಜೆಪಿ ಸರ್ಕಾರವು ಕೈಬಿಡಲು ಆದೇಶಿಸಿದೆ. ದ್ವೇಷ ಮತ್ತು ಹಗೆತನ ಬೀರುವ ಕಾರ್ಯದಲ್ಲಿ ಬಿಜೆಪಿ ತೊಡಗಿರುವುದಕ್ಕೆ ಇದೇ ಸಾಕ್ಷಿ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಆಡಳಿತದಲ್ಲಿದ್ದರೂ ಏನೂ ಪ್ರಯೋಜನವಿಲ್ಲ. ಈ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಹಿಂಪಡೆದಿರುವ ಅನುದಾನವನ್ನು ತುರ್ತಾಗಿ ನೀಡಬೇಕೆಂದು ಒತ್ತಾಯಿಸಿದರು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.