ಹಾಸನ:ಯಾವುದೇ ಯೋಜನೆ ಅನುಷ್ಠಾನ ಮಾಡುವ ಮೊದಲು ಸಂಬಂಧಪಟ್ಟ ಸದಸ್ಯರ ಗಮನಕ್ಕೆ ತರದೇ ಅವೈಜ್ಞಾನಿಕವಾಗಿ ಕೆಲಸ ನಿರ್ವಹಿಸಿದರೆ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್ ಖಡಕ್ ಎಚ್ಚರಿಕೆ ನೀಡಿದರು.
ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ ಕೆಡಿಪಿ ಸಭೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕೆಲವು ತಾಲೂಕುಗಳ ಬಹುತೇಕ ಹಳ್ಳಿಗಳಿಗೆ ಅದರಲ್ಲೂ ಜಿಪಂ ಸದಸ್ಯರ ಸ್ವಂತ ಊರುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಅವಮಾನಕರವಾದದ್ದು. ಅಧಿಕಾರಿಗಳು ಆದ್ಯತೆ ಮೇರೆಗೆ ತುರ್ತಾಗಿ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.
ಐಎಂಐಎಸ್ ಅಡಿಯಲ್ಲಿನ ಯಾವುದೇ ಯೋಜನೆಗಳನ್ನು ಅನುಷ್ಠಾನ ಮಾಡುವ ಮೊದಲು ಜಿಪಂನ ಸಂಬಂಧಿತ ಸದಸ್ಯರ ಗಮನಕ್ಕೆ ತರದೇ ಅವೈಜ್ಞಾನಿಕವಾಗಿ ಕೆಲಸ ಮಾಡುತ್ತಿದ್ದು, ಇದು ಮುಂದುವರಿದಲ್ಲಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳಾದ ವಿಧವಾ ವೇತನ, ವೃದ್ಧಾಪ್ಯ ವೇತನಗಳಡಿಯಲ್ಲಿ ಇರುವ ಫಲಾನುಭವಿಗಳಿಗೆ ಕಳೆದ ಮುರ್ನಾಲ್ಕು ತಿಂಗಳುಗಳಿಂದ ಅಂಚೆ ಮೂಲಕ ವೇತನ ಬರದಿರುವ ಕುರಿತು 2000ಕ್ಕೂ ಹೆಚ್ಚಿನ ದೂರುಗಳಿದ್ದು, ಆ ಕುರಿತು ಕೂಡಲೇ ಗಮನ ಹರಿಸುವಂತೆ ಅಧಿಕಾರಿಗೆ ಹೇಳಿದರು.
ಪ್ರತಿ ಇಲಾಖೆ ಅಧಿಕಾರಿಗಳು ಸಂಬಂಧಿತ ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ ಕೆಲಸ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕೆಂದುಅಧಿಕಾರಿಗಳಿಗೆ ಕರೆ ನೀಡಿದರು. ಇದೇ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕೂಡ ಅಧಿಕಾರಿಗಳಿಗೆ ಸೂಚನೆ ನೀಡಿದರು.