ಹಾಸನ:ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಸಭೆಯ ಆರಂಭದಲ್ಲಿ ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಹಾಸನದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ಈ ಸಂಧರ್ಭದಲ್ಲಿ ಮಾತನಾಡಿದ ಕಾನೂನು ಸಂಸದೀಯ, ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ, ಶಿವಕುಮಾರ ಸ್ವಾಮೀಜಿ ಅವರು ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದರು. ಶಿಕ್ಷಣದಿಂದ ವಂಚಿತರಾಗಿದ್ದ ಸಾವಿರಾರು ಬಡಮಕ್ಕಳಿಗೆ ಊಟ, ವಸತಿ, ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸಿದ್ದಾರೆ ಎಂದರು.
ಜಿಲ್ಲೆಯ ಪ್ರತೀ ತಾಲೂಕಿನಲ್ಲಿಯೂ ಪಿಂಚಣಿ ಅದಾಲತ್ ನಡೆಸಿ ಉಪ ವಿಭಾಗಾಧಿಕಾರಿಗಳು ಕಡ್ಡಾಯವಾಗಿ ಸ್ಥಳದಲ್ಲಿದ್ದು, ಅರ್ಜಿ ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸೂಚಿಸಿದರು. ಪಿಂಚಣಿಗಾಗಿ ಬಂದ ಹೊಸ ಅರ್ಜಿಗಳು 45 ದಿನಗಳೊಳಗೆ ವಿಲೇವಾರಿಯಾಗಬೇಕು. ಅಲ್ಲದೆ ತಹಶೀಲ್ದಾರರು ಇದರ ಜವಾಬ್ದಾರರು. ನಂತರದಲ್ಲಿ ಆರ್ಟಿಜಿಎಸ್ ಮೂಲಕ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ತಲುಪಲಿದೆ ಎಂದರು.
ಜಿಲ್ಲೆಯ ಚನ್ನರಾಯಪಟ್ಟಣ ಮತ್ತು ಅರಸೀಕೆರೆ ತಾಲೂಕಿನ ಬಹುತೇಕ ಹಳ್ಳಿಗಳಿಗೆ ಕುಡಿಯುವ ನೀರಿನ ಸೌಲಭ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಡಿಸಿದ ಹೆಚ್.ಡಿ.ರೇವಣ್ಣ ಹಾಗೂ ಕೆ.ಎಂ.ಶಿವಲಿಂಗೇಗೌಡರಿಗೆ ಆ ಕುರಿತ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿ ಕಡ್ಡಾಯವಾಗಿ ನೀರು ಕೊಡಿಸುವ ಜವಾಬ್ದಾರಿ ತಮ್ಮದೆಂದು ಸಚಿವರು ಭರವಸೆ ನೀಡಿದರು.
ಅರಣ್ಯ ಪ್ರದೇಶದಲ್ಲಿ ಮತ್ತು ಅನಧಿಕೃತವಾಗಿ ನಡೆಯುತ್ತಿರುವ ಕ್ರಶರ್ಗಳ ಕುರಿತು ಒಂದು ವಾರದೊಳಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಮಾಧುಸ್ವಾಮಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಈ ಕುರಿತು ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿದರು.