ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ ಹೆಚ್ಚಾಗುತ್ತಿದ್ದು, ಈ ಸಂಬಂಧ ನಾಳೆ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ಕರೆದು ಚರ್ಚೆ ಮಾಡುವುದಾಗಿ ಅರಣ್ಯ ಇಲಾಖೆ ನೂತನ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.
ಸಚಿವ ಅರವಿಂದ ಲಿಂಬಾವಳಿ ಪ್ರತಿಕ್ರಿಯೆ ಹಾಸನದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಒಂದು ವಾರದಿಂದ ಕಾಡಾನೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಒಂದು ಕಾಡಾನೆಗೆ ರೇಡಿಯೋ ಕಾಲರ್ ಹಾಕಲಾಗಿದೆ. ಇನ್ನುಳಿದ ಎರಡು ಹೆಣ್ಣು ಆನೆಗಳು ಮತ್ತು ಒಂದು ಗಂಡಾನೆ ಹಿಡಿಯುವ ಕಾರ್ಯ ಬಾಕಿ ಉಳಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ರು. ಇನ್ನು ಸಮ್ಮಿಶ್ರ ಸರ್ಕಾರದಲ್ಲಿ ನೀಡಿದ ನೂರು ಕೋಟಿ ಅನುದಾನದಲ್ಲಿ ಕೊಡಗು ಮತ್ತು ಸಕಲೇಶಪುರ ಗಡಿ ಭಾಗದಲ್ಲಿ ರೈಲ್ವೆ ಕಂಬಿಗಳನ್ನು ಅಳವಡಿಸುವ ವಿಚಾರದಲ್ಲಿ ಜಿಲ್ಲೆಗೆ ಆಗಿರುವ ಪ್ಲಾನ್ಗಿಂತ ಹೆಚ್ಚಿನ ಪ್ರಮಾಣದಲ್ಲಿ ಬೇಲಿ ನಿರ್ಮಿಸಬೇಕಿದೆ. ಈ ಬಗ್ಗೆ ಅಗತ್ಯವಿದ್ದರೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದ್ರು. ಅಧಿಕಾರಿಗಳೊಂದಿಗೆ ಸಚಿವ ಅರವಿಂದ ಲಿಂಬಾವಳಿ ಸಭೆ ನಾಳೆ ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ಮುಗಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಕಾಡಾನೆ ಹಾವಳಿ ಪ್ರದೇಶಕ್ಕೆ ಭೇಟಿ ನೀಡುತ್ತೇನೆ. ರಸ್ತೆ ಸೇತುವೆ ನಿರ್ಮಾಣದಿಂದ ಆನೆಗಳ ಪಥ ಬದಲಾಗಿದೆ. ಕಾಡು ಉಳಿಯಬೇಕು, ಜೊತೆಗೆ ಜನರಿಗೆ ಹಾಗೂ ಪ್ರಾಣಿಗಳಿಗೂ ತೊಂದರೆಯಾಗದಂತೆ ಯೋಜನೆ ರೂಪಿಸಲು ಕ್ರಮ ಕೈಗೊಳ್ಳುತ್ತೇವೆ. ಇದರ ಜೊತೆಗೆ ಆನೆ ಹಾವಳಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಮತ್ತು ಪ್ರಾಣಹಾನಿಗೆ ಶೀಘ್ರ ಪರಿಹಾರವನ್ನು ಬಿಡುಗಡೆಗೆ ಮಾಡಲು ತುರ್ತು ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು.