ಹಾಸನ: ಎಲ್ಲಾ ಜಿಲ್ಲೆಗಳಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪಾಸಿಟಿವ್ ದರ ಕಡಿಮೆ ಮಾಡಲು ಕಟ್ಟುನಿಟ್ಟಿನ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ನಿರ್ದೇಶಿಸಿದ್ದಾರೆ.
ಕೊರೊನಾ ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಹಾಸನದ ಅಧಿಕಾರಿಗಳಿಗೆ ಸಚಿವ ಕೆ. ಸುಧಾಕರ್ ಸೂಚನೆ - ಪಾಸಿಟಿವ್ ದರ ಕಡಿಮೆ ಮಾಡುವಂತೆ ಸಚಿವರ ಸೂಚನೆ
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ಕುರಿತು ವಿಡಿಯೋ ಸಂವಾದ ನಡೆಸಿದ ಸಚಿವ ಕೆ. ಸುಧಾಕರ್ ಹಾಸನದಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ನಿರ್ಲಕ್ಷ ತೋರದೆ ಕೋವಿಡ್ ಪರೀಕ್ಷೆ ನಡೆಸುವುದು, ಸೋಂಕಿತರ ಪತ್ತೆ ಕಾರ್ಯ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಇಂತಹ ಪ್ರತಿಯೊಂದು ವಿಷಯದಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ಕುರಿತು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಬೂತ್ ಮಟ್ಟದ ಸಮಿತಿ, ವಾರ್ಡ್ ಮಟ್ಟದ ಸಮಿತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಮೂಲಕ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಶೀತ ಜ್ವರದಿಂದ ಬಳಲುತ್ತಿರುವ ಪ್ರಕರಣಗಳು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರ ಬಗ್ಗೆ ಪೂರ್ಣ ಮಾಹಿತಿ ಪಡೆದು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಹಂತದಲ್ಲಿ ಬರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳಲ್ಲಿ ಐ.ಎಲ್.ಐ., ಸಾರಿ, ಗರ್ಭಿಣಿಯರು, ಡಯಾಬಿಟಿಸ್ ಹಾಗೂ ಕೋವಿಡ್ ರೋಗ ಲಕ್ಷಣಗಳಿರುವವರ ಪ್ರತಿ ಮನೆ- ಮನೆ ಸಮೀಕ್ಷೆ ಮಾಡಿ ಪರೀಕ್ಷೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಗಳಲ್ಲಿ ಗುರುತಿಸಿರುವ ಹಾಟ್‍ಸ್ಪಾಟ್‍ಗಳು ಹಾಗೂ ಕಂಟೈನ್ಮೆಂಟ್ ವಲಯಗಳಲ್ಲಿನ ಎಲ್ಲಾ ಜನರನ್ನು ಪರೀಕ್ಷೆಗೆ ಒಳಪಡಿಸಿ ಕೋವಿಡ್ ಹರಡದಂತೆ ನಿಗಾ ವಹಿಸುವಂತೆ ಸೂಚಿಸಿದರಲ್ಲದೆ, ಸೋಂಕಿತರು ಹೆಚ್ಚಾಗಿರುವ ತಾಲೂಕುಗಳ ಮೇಲೆ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಿದರು.
ಕೆಲವು ಜನರ ನಿರ್ಲಕ್ಷ್ಯದಿಂದ ಅಮಾಯಕ ಜನರ ಬಲಿಯಾಗುತ್ತಿದ್ದು, ಸೋಂಕಿತರ ಸಂಖ್ಯೆಯನ್ನು ಕಡಿಮೆ ಮಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾಗೂ ಆಸ್ಪತ್ರೆಗಳಲ್ಲಿ ಔಷದೋಪಚಾರಗಳ ಕೊರತೆಯಾಗದಂತೆ ಕ್ರಮವಹಿಸುವಂತೆ ಸಚಿವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.
ಪ್ರತಿಯೊಬ್ಬ ಅಧಿಕಾರಿಯೂ ನಿರ್ಲಕ್ಷ ತೋರದೆ ಕೋವಿಡ್ ಪರೀಕ್ಷೆ ನಡೆಸುವುದು, ಸೋಂಕಿತರ ಪತ್ತೆ ಕಾರ್ಯ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಇಂತಹ ಅಂಶಗಳು ಹಾಗೂ ಪ್ರತಿಯೊಂದು ವಿಷಯದಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಕೋವಿಡ್ ಸೋಂಕಿನಿಂದ ಸಾವಿನ ಸಂಖ್ಯೆ ಹೆಚ್ಚಾಗದಂತೆ ಎಚ್ಚೆತ್ತುಕೊಂಡು ಚಿಕಿತ್ಸೆ ನೀಡುವಂತೆ ಹಾಗೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‍ನಿಂದ ಮೃತಪಟ್ಟವರ ಕುರಿತು ಪ್ರತಿ ದಿನ ವರದಿ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಐ.ಎಲ್.ಐ. ಪ್ರಕರಣಗಳು ಹಾಗೂ ರೋಗಲಕ್ಷಣಗಳಿರುವವರು ದಾಖಲಾಗಿದ್ದರೆ ಅಂತಹವರ ಮಾಹಿತಿ ಪಡೆದು ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ ಸಚಿವ ಸುಧಾಕರ್ ಅಧಿಕಾರಿಗಳಿಗೆ ನಿರ್ದೇಶಿಸಿದರು. ಸೋಂಕಿತರಿಗೆ ಕೋವಿಡ್ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಹಣಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿದ್ದಲ್ಲಿ ಅಂತಹ ಆಸ್ಪತ್ರೆಗಳಿಗೆ ದಂಡ ವಿಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸದೆ ಸರ್ಕಾರದ ನಿಯಮ ಉಲ್ಲಂಘಿಸಿದವರಿಗೆ ಹೆಚ್ಚಿನ ದಂಡ ವಿಧಿಸುವಂತೆ ಹಾಗೂ ಜಿಲ್ಲೆಯಲ್ಲಿನ ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಿನಕ್ಕೆ 100 ಪ್ರಕರಣ ದಾಖಲಿಸುವಂತೆ ಗುರಿ ನೀಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು.