ಸಕಲೇಶಪುರ: ತಾಲೂಕಿನ ಜನರಿಗೆ ಮಳೆಯಿಂದ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸಮರೋಪಾದಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.
ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು: ಸಚಿವ ಗೋಪಾಲಯ್ಯ ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಉಂಟಾಗಿರುವ ಮಳೆ ಹಾನಿ ನೋಡಲು ನಾನು ಆಗಮಿಸಿದ್ದೇನೆ. ಕಳೆದ ನಾಲ್ಕೈದು ದಿನಗಳಿಂದ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದೆ. ಹಲವಾರು ಮನೆಗಳು ಬಿದ್ದಿವೆ. ಸುಮಾರು 300ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಒಂದೆಡೆ ಕೊರೊನಾ ಕಾಟ ಮತ್ತೊಂದೆಡೆ ಮಳೆ ವಿಪತ್ತು. ಈ ನಡುವೆ ಅಧಿಕಾರಿಗಳು ಮುಖ್ಯಮಂತ್ರಿಗಳ ಆದೇಶದಂತೆ ಜನರಿಗಾಗಿ ಹಗಲು ರಾತ್ರಿ ಕೆಲಸ ಮಾಡಬೇಕು ಎಂದರು.
ಸರ್ಕಾರ ಕೊರೊನಾ ಸೇರಿದಂತೆ ಮಳೆ ವಿಪತ್ತು ಎದುರಿಸಲು ಶಕ್ತವಾಗಿದೆ. ಸರ್ಕಾರದಲ್ಲಿ ಯಾವುದೇ ರೀತಿಯ ಆರ್ಥಿಕ ಸಮಸ್ಯೆಯಿಲ್ಲ. ಕೋವಿಡ್ ರೋಗಿಗಳಿಗೆ ಬೆಡ್‌ಗಳು, ವೆಂಟಿಲೇಟರ್ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಮಳೆ ಹಾನಿ ಪರಿಹಾರಕ್ಕೂ ಸಹ ಸರ್ಕಾರದಿಂದ ಹಣ ಬಿಡುಗಡೆ ಮಾಡಲಾಗುತ್ತದೆ. ಈ ಕುರಿತು ಯಾವುದೇ ಆತಂಕ ಬೇಡ. ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಬೇಕು. ಸದ್ಯ ಕೊರೊನಾ ಸಂಕಷ್ಟ ಹಾಗೂ ಮಳೆ ಹಾನಿಯನ್ನು ನಿವಾರಿಸಲು ಆದ್ಯತೆ ನೀಡಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿ 75ರ ಅಗಲೀಕರಣ ಸಮಸ್ಯೆ ಹಾಗೂ ಕಾಡಾನೆ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಬಗೆಹರಿಸಲಾಗುವುದು ಎಂದರು.
ಶಾಸಕ ಎಚ್.ಕೆ ಕುಮಾರಸ್ವಾಮಿ ಮಾತನಾಡಿ, ಸರ್ಕಾರ ಕೂಡಲೇ ಮಳೆಹಾನಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ಕಾಡಾನೆ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಮಾಡಲು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲಾ ಉಸ್ತುವಾರಿ ಸಚಿವರು ಮೊದಲಿಗೆ ತುಂಬಿದ ಹೇಮಾವತಿ ನದಿಯಲ್ಲಿ ಬಾಗಿನ ಅರ್ಪಿಸಿದರು. ನಂತರ ಮಳೆಯಿಂದ ಹಾನಿಗೀಡಾದ ರಾಮ ಮಂದಿರ ವೀಕ್ಷಿಸಿ, ಕ್ಯಾಮನಹಳ್ಳಿ ಗ್ರಾಮದಲ್ಲಿ ಮೃತ ಪಟ್ಟ ರೈತನ ಪತ್ನಿಗೆ 4ಲಕ್ಷರೂ ಪರಿಹಾರದ ಚೆಕ್ ವಿತರಿಸಿದರು. ಬಳಿಕ ಇತರ ಮಳೆಹಾನಿ ಪ್ರದೇಶಗಳನ್ನು ವೀಕ್ಷಿಸಿ ಅಧಿಕಾರಿಗಳ ಸಭೆ ನಡೆಸಿದರು.
ಈ ಸಂಧರ್ಭ ಜಿಲ್ಲಾಧಿಕಾರಿ ಗಿರೀಶ್, ಜಿ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಪರಮೇಶ್, ಉಪವಿಭಾಗಾಧಿಕಾರಿ ಗಿರೀಶ್ ನಂದನ್, ಸೇರಿದಂತೆ ಇತರರು ಹಾಜರಿದ್ದರು