ಹಾಸನ :ವೃದ್ಧ ದಂಪತಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಶಂಕಿತ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನ ಬಂಧಿಸಲು ಹೋದಾಗ ಆರೋಪಿ ಪೊಲೀಸರ ಮೇಲೆಯೇ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಹೇಳಿದರೂ ಕೇಳದ ಆರೋಪಿ ಚಾಕುವಿನಿಂದ ದಾಳಿ ಮಾಡಲು ಯತ್ನಿಸುತ್ತಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮತ್ತೊಬ್ಬ ಅಧಿಕಾರಿ ಆರೋಪಿ ಮೇಲೆ ಬಂದೂಕಿನಿಂದ ಶೂಟ್ ಮಾಡಿದ್ದಾರೆ.
ವೃದ್ಧ ದಂಪತಿಯ ಹತ್ಯೆ:
ಚನ್ನರಾಯಪಟ್ಟಣ ತಾಲೂಕಿನ ಆಲಗೊಂಡನಹಳ್ಳಿಯಲ್ಲಿ ಭಾನುವಾರ ವೃದ್ಧ ದಂಪತಿಯನ್ನು ಹತ್ಯೆ ಮಾಡಲಾಗಿತ್ತು. ಆರೋಪಿ ಪ್ರಸಾದ್ ಅಲಿಯಾಸ್ ಗುಂಡ ಎಂಬುವನು ಚನ್ನರಾಯಪಟ್ಟಣ ತಾಲೂಕಿನ ರೇಚಿಹಳ್ಳಿ ಗ್ರಾಮದ ಹೊರವಲಯದ ಕೋಳಿ ಫಾರಂನಲ್ಲಿ ಅಡಗಿದ್ದನು. ಈ ಬಗ್ಗೆ ಮಾಹಿತಿ ತಿಳಿದು ಈತನನ್ನು ಹಿಡಿಯಲು ಹೋದಾಗ ಆರೋಪಿ ಪೊಲೀಸರ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಕೊಲೆಗಾರನ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿದ್ದಾರೆ. ಆರೋಪಿ ಪ್ರಸಾದ್ ಅಲಿಯಾಸ್ ಗುಂಡನ ಎಡಗಾಲಿನ ಮಂಡಿ ಭಾಗಕ್ಕೆ ಗುಂಡೇಟು ಬಿದ್ದಿದೆ.
ಭಾನುವಾರ ಸೆ. 30 ರಂದು ಆಲಗೊಂಡನಹಳ್ಳಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ವಾಸವಿದ್ದ ವೃದ್ಧ ದಂಪತಿ ಮುರುಳಿಧರ್ (71) ಹಾಗೂ ಉಮಾದೇವಿ (67) ಅವರನ್ನು ಎರಡು ದಿನಗಳ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸದಂತೆ ಬರಗೂರು ಕೊಪ್ಪಲು ಗ್ರಾಮದ ಮಂಜಶೆಟ್ಟಿ ಮತ್ತು ರೇಚಿಹಳ್ಳಿ ಗ್ರಾಮದ ಪ್ರಸಾದ್ ಅಲಿಯಾಸ್ ಗುಂಡ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಬಂಧಿಸಲು ಮುಂದಾದ ಇನ್ಸ್ಪೆಕ್ಟರ್ ವಿನಯ್ ಮೇಲೆ ಚಾಕುವಿನಿಂದ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಆಗ ರಕ್ಷಣೆಗಾಗಿ ವಿನಯ್ ಜೊತೆ ಇದ್ದ ಮತ್ತೊಬ್ಬ ಇನ್ಸ್ಪೆಕ್ಟರ್ ಸಿದ್ದರಾಮೇಶ್ವರ್ ಅವರು ಫೈರಿಂಗ್ ಮಾಡಿದ್ದಾರೆ. ಈ ವೇಳೆ ವಿನಯ್ ಅವರ ಎಡಗೈಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಉಸಿರುಗಟ್ಟಿಸಿ ಕೊಲೆ:
ಲಾಕ್ಡೌನ್ ಸಮಯದಲ್ಲಿ ಊರಿಗೆ ಬಂದಿದ್ದ ಆರೋಪಿಗಳು ದುಡ್ಡಿಗಾಗಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. 80 ಎಕರೆ ಜಮೀನು ಹೊಂದಿದ್ದ ಮುರುಳಿಧರ್ ಅವರಿಗೆ ಮಕ್ಕಳಿರಲಿಲ್ಲ. ಅವರು ಆ ಜಮೀನನ್ನು ಮಾರಿ ಮನೆಯಲ್ಲಿ ದುಡ್ಡು ಇಟ್ಟಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಆರೋಪಿಗಳು ದರೋಡೆಗೆ ಯತ್ನಿಸಿದ್ದರು. ಈ ವೇಳೆ ವೃದ್ಧ ದಂಪತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.
ಗಾಯಗೊಂಡ ಡಿಸಿಐಬಿ ಸರ್ಕಲ್ ಇನ್ಸ್ಪರಕ್ಟರ್ ಈ ವಿಚಾರವಾಗಿ ಮಾತನಾಡಿದ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಎರಡು ದಿನಗಳ ಹಿಂದೆ ಜೋಡಿ ಕೊಲೆಯಾಗಿತ್ತು. ಮಾಹಿತಿ ಆಧರಿಸಿ ಆರೋಪಿಗಳ ಪತ್ತೆಗೆ ನಮ್ಮ ಪೊಲೀಸರು ತೆರಳಿದ್ದರು. ಸ್ಥಳಕ್ಕೆ ತೆರಳಿದ ವೇಳೆ ಆರೋಪಿಗಳಿಗೆ ಶರಣಾಗುವಂತೆ ಪೊಲೀಸರು ಹೇಳಿದ್ದಾರೆ. ಆದರೆ, ಅವರು ಶರಣಾಗದೇ ಪೊಲೀಸರ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ನಮ್ಮ ಪೊಲೀಸರು ಫೈರಿಂಗ್ ಮಾಡಿದ್ದಾರೆ ಎಂದರು.
ಆರೋಪಿ ಮತ್ತು ಸಿಪಿಐ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರ ಆರೋಗ್ಯದಲ್ಲೂ ಚೇತರಿಕೆ ಕಂಡು ಬಂದಿದೆ. ಸರಣಿ ಕೊಲೆಯಾಗುತ್ತಿರುವ ಚನ್ನರಾಯಪಟ್ಟಣ ಸೇರಿ ಎಲ್ಲೆಡೆ ಗಂಭೀರ ಕ್ರಮ ಕೈಗೊಂಡು ನಿಗಾ ವಹಿಸಿದ್ದೇವೆ. ಒಟ್ಟು ಈಗ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದೇವೆ. ಇನ್ನೂ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.
ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್ ಈ ಕೊಲೆ ಪ್ರಕರಣದಲ್ಲಿ ಒಟ್ಟು ಐವರು ಆರೋಪಿಗಳಿದ್ದು ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈ ಆರೋಪಿ ಪ್ರಸಾದ್ ಅಲಿಯಾಸ್ ಗುಂಡ ಎಂಬುವನು ರೌಡಿಶೀಟರ್ ಆಗಿದ್ದು, ಬೆಂಗಳೂರಿನ ಸಂಜಯ್ ನಗರ, ಉಪ್ಪಾರಪೇಟೆ ಮತ್ತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಹಲವು ಕೇಸ್ಗಳು ದಾಖಲಾಗಿದೆ. ಹಾಸನ ಜಿಲ್ಲೆಯ ಜನರು ಭಯಪಡಬೇಡಿ, ಯಾವುದೇ ಮಾಹಿತಿಗಳಿದ್ದರೂ ಪೊಲೀಸರಿಗೆ ನೀಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಉಳಿದ ಮೂವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ಮಾಡಿದಾಗಲೇ ಅಸಲಿ ಸತ್ಯಾಸತ್ಯತೆ ಹೊರಬೀಳಲಿದೆ.