ಹಾಸನ:ಕೊರೊನಾದಿಂದಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ರೈತರು ಮತ್ತು ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕರ್ನಾಟಕ ರೈತ ಪ್ರಾಂತ ಸಂಘ ಹಾಗೂ ದಲಿತ ಹಕ್ಕುಗಳ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜನರನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಜನದ್ರೋಹಿ ತಿದ್ದುಪಡಿ ಕಾಯ್ದೆ, ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ಸಂಸ್ಥೆಗಳ ಖಾಸಗೀಕರಣವನ್ನು ತಡೆಯಬೇಕು. ಕೊರೊನಾ ಸೋಂಕು ಹರಡದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ನಾಗರಿಕರಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆ ದೊರೆಯುವಂತೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.
ರೈತರು ಮತ್ತು ಕೂಲಿ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ. ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ. 3 ರಷ್ಟು ಅಂಶವನ್ನು ವೆಚ್ಚ ಮಾಡಲು ಕ್ರಮ ವಹಿಸಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲಾ ಕುಟುಂಬಗಳಿಗೆ ಮಾಸಿಕ 7,500 ರೂಗಳ ನೆರವು ಘೋಷಿಸಬೇಕು. ಈ ಎಲ್ಲಾ ಕುಟುಂಬಗಳ ಸದಸ್ಯರಿಗೆ, ಮಾಸಿಕ ತಲಾ 10 ಕೆ.ಜಿ ಸಮಗ್ರ ಆಹಾರ ಸಾಮಗ್ರಿ ಹಾಗೂ ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್‌ನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ತಲಾ ಕುಟುಂಬಕ್ಕೆ ಕನಿಷ್ಟ 200 ದಿನಗಳ ಕೆಲಸ ನೀಡಬೇಕು. ಕೂಲಿ ಹಣವನ್ನು ಕನಿಷ್ಟ 600 ರೂ.ಗಳಿಗೆ ಹೆಚ್ಚಿಸಬೇಕು. ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ಒದಗಿಸಬೇಕು. ಎಲ್ಲಾ ಕಾರ್ಮಿಕರಿಗೆ ಲಾಕ್‌ಡೌನ್ ಅವಧಿಯ ವೇತನ ದೊರೆಯುವಂತೆ ಅಗತ್ಯ ಕ್ರಮ ವಹಿಸಬೇಕು. ಕಾರ್ಮಿಕ ಕಾಯ್ದೆಗಳ ದುರ್ಬಲಗೊಳಿಸುವಿಕೆಯನ್ನು ತಕ್ಷಣ ತಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.