ಸಕಲೇಶಪುರ: ಉತ್ತರ ಪ್ರದೇಶದ ಹಥ್ರಾಸ್ನಲ್ಲಿ ದಲಿತ ಯುವತಿಯ ಮೇಲೆ ನಡೆದ ಗ್ಯಾಂಗ್ ರೇಪ್ ಖಂಡಿಸಿ ಬಹುಜನ ಸಮಾಜ ಪಕ್ಷ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ವತಿಯಿಂದ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಹೇಮಾವತಿ ಸೇತುವೆಯಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಕಾರರು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಅವರಿಗೆ ದಲಿತ ಸಂಘಟನೆಗಳು ಮನವಿ ಸಲ್ಲಿಸಿದರೆ, ಬಹುಜನ ಸಮಾಜದ ವತಿಯಿಂದ ಮಿನಿವಿಧಾನಸೌಧದ ಮುಂಭಾಗ ಕೆಲ ಕಾಲ ಧರಣಿ ನಡೆಸಿ ಶಿರಸ್ತೇದಾರ್ ಉಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಹಥ್ರಾಸ್ನಲ್ಲಿ ದಲಿತ ಯುವತಿಯ ಮೇಲೆ ನಡೆದ ಗ್ಯಾಂಗ್ ರೇಪ್ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರತಿಭಟನಕಾರರು ಮಾತನಾಡಿ, ಉತ್ತರ ಪ್ರದೇಶದಲ್ಲಿ ನಿರಂತರವಾಗಿ ದಲಿತರ ಮೇಲೆ ಹಲ್ಲೆ ಅತ್ಯಾಚಾರಗಳು ನಡೆಯುತ್ತಿದ್ದು, ಕುಮಾರಿ ಮೋನಿಷಾ ವಾಲ್ಮೀಕಿ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿ ಬರ್ಬರವಾಗಿ ಹಲ್ಲೆ ಮಾಡಿ ಕೊಲ್ಲಲಾಗಿದೆ. ಆಕೆಯ ಸಾವಿಗೆ ಕಾರಣರಾದ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ಸರಿಯಾದ ಆಡಳಿತ ನಡೆಸದೇ ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವಾಗಿರುವ ಯೋಗಿ ಆದಿತ್ಯನಾಥ್ ಸರ್ಕಾರವನ್ನು ರಾಷ್ಟ್ರಪತಿಗಳು ವಜಾಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿ.ಎಸ್.ಪಿ ತಾಲೂಕು ಅಧ್ಯಕ್ಷ ತಮ್ಮಯ್ಯ, ಕಲ್ಪನಾ ಕೀರ್ತಿ, ಲಕ್ಷ್ಣಣ್ ಕೀರ್ತಿ, ಹಸೈನಾರ್, ಪುಟ್ಟರಾಜು, ವೇಣು, ಮುಂತಾದವರು ಹಾಜರಿದ್ದರು.