ಹಾಸನ: ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ಇಲ್ಲಿನ ರಕ್ಷಣಾಪುರಂ ನಿವಾಸಿ ಸುಚಿತ್ರಾ (33) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸುಚಿತ್ರಾ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು.
ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಗ್ರಾಮ ಒನ್ ಕೇಂದ್ರದಲ್ಲಿ ದ್ವಿತೀಯ ದರ್ಜೆ ಸಹಾಯಕಿ ಆಗಿ ಇವರು ಕಾರ್ಯ ನಿರ್ವಹಿಸುತ್ತಿದ್ದರು. ಪತಿ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಅನುಕಂಪದ ಆಧಾರದ ಹಿನ್ನೆಲೆ ಪತ್ನಿ ಸುಚಿತ್ರಾಗೆ ಸರ್ಕಾರ ಕೆಲಸ ನೀಡಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೃಹ ರಕ್ಷಕ ದಳ ಸಿಬ್ಬಂದಿ ಸಾವು: ಮಧ್ಯಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ನಿಮಿತ್ತ ಕರ್ತವ್ಯಕ್ಕೆ ಹಾಜರಾಗಿ ವಾಪಸ್ ಆಗುವಾಗ ಮಂಡ್ಯದ ಮಳವಳ್ಳಿ ತಾಲೂಕಿನ ಬೆಳಕವಾಡಿಯ ಸಿದ್ದು ಎಂಬ ಗೃಹರಕ್ಷಕ ದಳ ಸಿಬ್ಬಂದಿ ಮೃತಪಟ್ಟ ಘಟನೆ ನಡೆದಿದೆ. ಚುನಾವಣೆ ಮುಗಿಸಿಕೊಂಡು ಮದ್ಯಪ್ರದೇಶದಿಂದ ಬೆಂಗಳೂರಿಗೆ ರೈಲಿನಲ್ಲಿ ವಾಪಸ್ ಆಗುವಾಗ ಲೋ ಬಿಪಿಯಾಗಿ ರೈಲಿನ ಶೌಚಗೃಹದಲ್ಲೇ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.