ಹಾಸನ: ಗುಜರಾತ್ ಮಾದರಿಯಲ್ಲಿ ಪಕ್ಷವನ್ನು ರಾಜ್ಯದಲ್ಲಿ ಸಂಘಟನೆ ಮಾಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ದೇಶದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯಪಟ್ಟರು.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಈಗ ಉತ್ತಮ ಕೆಲಸ ಮಾಡುತ್ತಿದ್ದಾರೆ ಇದಕ್ಕೆ ನನ್ನ ಎಲ್ಲಾ ಕಾರ್ಯಕರ್ತರು ಸಕ್ರಿಯವಾಗಿರುವುದು ಕಾರಣ. ಗುಜರಾತ್ ಮಾದರಿಯಲ್ಲಿ ಪಕ್ಷವನ್ನು ರಾಜ್ಯದಲ್ಲಿ ಸಂಘಟನೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಬಸ್ ಪಾಸ್, ವಿದ್ಯಾರ್ಥಿವೇತನ ಹಾಗೆ ಹಿರಿಯ ನಾಗರಿಕರಿಗೆ ವೃದ್ಧಾಪ್ಯವೇತನ, ಸಂಧ್ಯಾ ಸುರಕ್ಷಾ ಮುಂತಾದ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಳ್ವಿಕೆ ನಡೆಸುತ್ತಿರುವುದರಿಂದ ಜನಸಾಮಾನ್ಯರಿಗೆ ಕೆಲಸಗಳಿಗೆ ಅನುಕೂಲವಾಗಲಿದೆ ಎಂದು ಅರುಣ್ ಸಿಂಗ್ ಅಭಿಪ್ರಾಯಪಟ್ಟರು.
ನಮ್ಮ ಸರ್ಕಾರದಲ್ಲಿ ರೈತರಿಗೆ ಶೇಕಡಾ 90ರಷ್ಟು ಸಬ್ಸಿಡಿಯನ್ನು ನೀಡಲಾಗಿದೆ. ನೀರಾವರಿ ಕ್ಷೇತ್ರದಲ್ಲೂ ಹಾಸನಕ್ಕೆ ನೂರಾರು ಕೋಟಿ ಅನುದಾನವನ್ನು ನೀಡಿದ್ದೇವೆ. ಹಾಸನ ನಗರಕ್ಕೆ 165 ಕೋಟಿ ರೂಪಾಯಿ ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಸಂಪೂರ್ಣಗೊಳಿಸಲಾಗುತ್ತಿದೆ. ಹಾಸನದ ಶಾಸಕರು ತಳಮಟ್ಟದಿಂದ ಕೆಲಸ ನಿರ್ವಹಿಸುತ್ತಿದ್ದು, ಜಿಲ್ಲಾ ಉಸ್ತುವಾರಿ ಹಾಗೂ ಪಕ್ಷದ ನಾಯಕರು ಮತ್ತು ಜನಪ್ರತಿನಿಧಿಗಳು ನಗರ ಮತ್ತು ಜಿಲ್ಲೆಯ ಅಭಿವೃದ್ಧಿ ಪಥದ ಕಡೆ ಕೊಂಡೊಯ್ಯುತ್ತಿದ್ದಾರೆ. ಮುಂದಿನ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿಯೇ ಉತ್ತಮ ಸ್ಥಾನ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾಸನದಲ್ಲಿಯೂ ಸರ್ಕಾರ ಸಾರ್ವಜನಿಕರಿಗೆ ಬೇಕಾದಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಕನಿಷ್ಠ 5 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಅರುಣ್ ಸಿಂಗ್ ವ್ಯಕ್ತಪಡಿಸಿದರು.