ಹಾಸನ: ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ನೀಡುತ್ತಿರುವ ಹಲವಾರು ಸೌಲಭ್ಯಗಳನ್ನು ಸಂಪೂರ್ಣ ಬಳಸಿಕೊಳ್ಳುವ ಮೂಲಕ ಅಭಿವೃದ್ಧಿ ಪಥದತ್ತ ಸಾಗುವಂತೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ತಿಳಿಸಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ಪೋಷಣಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು, ಹಿಂದುಳಿದವರು, ದುರ್ಬಲರು, ಅಸಹಾಯಕರು ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಮಹಿಳಾ ಅಭಿವೃದ್ಧಿ ನಿಗಮದಿಂದ ನೀಡುವ ಸೌಲಭ್ಯಗಳನ್ನು ಬಳಸಿಕೊಳ್ಳಿ ಎಂದರು.
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಮಹಿಳೆಯರಿಗಾಗಿ ಇರುವ ಉದ್ಯೋಗಿನಿ, ಚೇತನಾ ಯೋಜನೆ, ಲಿಂಗತ್ವ ಪುನರ್ವಸತಿ ಯೋಜನೆ, ಮಹಿಳೆಯರ ಕಿರುಸಾಲ, ಧನಶ್ರೀ ಯೋಜನೆ, ಸಮೃದ್ಧಿ ಯೋಜನೆ, ಮಹಿಳಾ ತರಬೇತಿ ಯೋಜನೆ ಹಾಗೂ ಮಾರುಕಟ್ಟೆ ನೆರವು ಯೋಜನೆಗಳ ಪ್ರಗತಿ ಕುರಿತು ಚರ್ಚೆ ನಡೆಸಿ ಮಾಹಿತಿ ಪಡೆದ ಅವರು, ಬಾಕಿ ಉಳಿದಿರುವ ಅನುದಾನವನ್ನು ಬಿಡುಗಡೆ ಮಾಡಿಸಲು ಕ್ರಮ ವಹಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಭಯಪಡದೆ, ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ವಚ್ಛತೆ ಕಾಪಾಡುವುದು ಹಾಗೂ ಆರೋಗ್ಯದ ಕಡೆ ಕಾಳಜಿವಹಿಸುವುದು ಅಗತ್ಯ. ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನೀಡುವ ಕೌಶಲ್ಯ ತರಬೇತಿಯಲ್ಲಿ ಪಾಲ್ಗೊಂಡು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕರೆ ನೀಡಿದರು.
ಸಶಕ್ತ ಮಕ್ಕಳಿಂದ ಮುಂದೆ ಸದೃಢ ಸಮಾಜ ನಿರ್ಮಾಣವಾಗುತ್ತದೆ. ಹಾಗಾಗಿ ಗರ್ಭಿಣಿಯರು ಪೌಷ್ಠಿಕ ಆಹಾರ ಸೇವಿಸುವ ಮೂಲಕ ತಮ್ಮ ಜೊತೆಗೆ ಮಕ್ಕಳ ಆರೋಗ್ಯದ ಮೇಲೂ ನಿಗಾವಹಿಸಬೇಕು ಎಂದು ತಿಳಿಸಿದರು.