ಹಾಸನ : ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ಹೊಂದಲು 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ಶಿರೀನ್ ತಾಜ್ ಕರೆ ನೀಡಿದರು.
ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಭಾರತೀಯ ಚುನಾವಣಾ ಆಯೋಗ, ತಹಸೀಲ್ದಾರ್ ಅವರ ಕಾರ್ಯಾಲಯದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮತ ಮೌಲ್ಯವು ಅತ್ಯಮೂಲ್ಯವಾದದ್ದು. ಮತವನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದು ಕರೆ ನೀಡಿದರು.
ಸುಭದ್ರವಾಗಿ ಪ್ರಜಾಪ್ರಭುತ್ವ ಸಾಧಿಸಲು ಮತದಾನ ಅಗತ್ಯ ದೇಶವನ್ನು ಅಭಿವೃದ್ಧಿಪಡಿಸುವ ಮತ್ತು ವ್ಯವಸ್ಥೆಯನ್ನು ಬದಲಾಯಿಸುವ ಶಕ್ತಿ ಯುವ ಮತದಾರರಿಗೆ ಇದೆ. ಯಾವ ವ್ಯಕ್ತಿ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೋ ಆ ವ್ಯಕ್ತಿ ಆ ದೇಶದ ನಾಗರಿಕರಾಗಿರುತ್ತಾರೆ. ಭಾರತದಲ್ಲಿ ಶೇ.65 ರಷ್ಟು ಮತದಾನ ನಡೆಯುತ್ತಿದೆ. ಮತದಾನದ ಪ್ರಮಾಣ ಕಡಿಮೆಯಾಗಲು ಯುವ ಮತದಾರ ನಿರಾಸಕ್ತಿ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ರು.
ಮತದಾನದ ಬಗ್ಗೆ ಜಾಗೃತಿ ಅರಿವು ಮೂಡಿಸಲು ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಿದ್ಯಾರ್ಥಿಗಳಿಂದ ಜಾಥಾ ನಡೆಸುವುದರ ಜೊತೆಗೆ ಪ್ರತಿಜ್ಞಾ ವಿಧಿ ಸಹ ಭೋದಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿರಿನ್ ತಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಸೇರಿದಂತೆ ಪದವಿ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.